ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಧರ್ಮನಾಥ ಭವನದಲ್ಲಿ ಶನಿವಾರ ನಡೆದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ ಅಭಿಯಾನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮೂಲಕ ಸರ್ಕಾರಗಳು ಬದಲಾಗುವುದು ಸಹಜ. ಆದರೆ, ಈಗ ನಡೆಯುತ್ತಿರುವುದು ಸರ್ಕಾರ ಬದಲಿಸುವ ಹೋರಾಟವಲ್ಲ. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸ್ಥಾಪಿಸಿದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬದಲಿಸುವ ಪ್ರಯತ್ನವಾಗಿದೆ. ಇದಕ್ಕೆ ಆಡಳಿತ ವ್ಯವಸ್ಥೆಯ ಬದಲಾವಣೆ (ರೆಜಿಮ್ ಚೇಂಜ್) ಎಂದು ಹೆಸರಿಸಲಾಗಿದೆ. ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅಸ್ಥಿರತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಮತ್ತು ಜಾಗತಿಕವಾಗಿ ಪ್ರಗತಿ ಸಾಧಿಸಿದೆ. ವಿಶ್ವಬ್ಯಾಂಕ್ ವರದಿಯ ಪ್ರಕಾರ, ದೇಶದಲ್ಲಿ ಸುಮಾರು 50 ಕೋಟಿ ಜನರು ತೀವ್ರ ಬಡತನದಿಂದ ಹೊರಬಂದಿದ್ದಾರೆ. ಭಾರತದ ತೀವ್ರ ಬಡತನದ ಪ್ರಮಾಣ ಶೇ.2.7ಕ್ಕೆ ಇಳಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯೂ ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯೆಂದು ಗುರುತಿಸಿದೆ. ಆಸ್ಟ್ರೇಲಿಯಾದ ಲೋವಿ ಸಂಸ್ಥೆಯ ಶಕ್ತಿ ಸೂಚ್ಯಂಕದಲ್ಲಿ ಭಾರತ ಮೂರನೇ ಸ್ಥಾನ ಪಡೆದಿರುವುದು ದೇಶದ ಜಾಗತಿಕ ಪ್ರಭಾವ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಭಾರತದ ಏಳಿಗೆಯನ್ನು ಸಹಿಸದ ಕೆಲವು ಜಾಗತಿಕ ಶಕ್ತಿಗಳು ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.ರಾಹುಲ್ ಗಾಂಧಿ ಕೈಯಲ್ಲಿ ಕೆಂಪು ಬಣ್ಣದ ಸಂವಿಧಾನದ ಪ್ರತಿ ಹಿಡಿದುಕೊಂಡು ಸಂವಿಧಾನ ಇಂದು ಅಪಾಯದಲ್ಲಿದೆ ಎಂದು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಸಂವಿಧಾನ ವಿರೋಧಿ ಬೆಳವಣಿಗೆಗಳನ್ನು ಅವರು ನೆನಪಿಸಿಕೊಳ್ಳಬೇಕು. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಚುನಾವಣೆಯನ್ನು ಅಲಹಾಬಾದ್ ಹೈಕೋರ್ಟ್ ಅಸಿಂಧುಗೊಳಿಸಿತ್ತು. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವ ಬದಲು ತುರ್ತು ಪರಿಸ್ಥಿತಿ ಹೇರಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸಲಾಯಿತು. ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಮೂಲಭೂತ ಹಕ್ಕುಗಳ ಮಹತ್ವವನ್ನು ಕುಗ್ಗಿಸುವ ಪ್ರಯತ್ನ ಮಾಡಲಾಯಿತು ಎಂದು ಟೀಕಿಸಿದರು.
ಭಾರತೀಯ ರಿಸರ್ವ್ ಬ್ಯಾಂಕ್, ಮಹಾಲೇಖಪಾಲರ ಕಚೇರಿ, ಚುನಾವಣಾ ಆಯೋಗ, ನ್ಯಾಯಾಂಗ ಮತ್ತು ಸಂಸತ್ತಿನಂತಹ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಚುನಾವಣೆಯಲ್ಲಿ ಸೋತಾಗ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಆರೋಪ ಮಾಡುವುದು, ಗೆದ್ದಾಗ ಅದೇ ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದು ಕಾಂಗ್ರೆಸ್ನ ದ್ವಂದ್ವ ನಿಲುವನ್ನು ತೋರಿಸುತ್ತದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರದಲ್ಲಿಯೂ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿಯೂ ಹಲವು ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿತ್ತು. ಮೃತಪಟ್ಟವರು, ಸ್ಥಳಾಂತರಗೊಂಡವರು ಮತ್ತು ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರನ್ನು ಪತ್ತೆಹಚ್ಚಿ ಪಟ್ಟಿ ಶುದ್ಧೀಕರಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿದೆ ಎಂದು ಸಮರ್ಥಿಸಿಕೊಂಡರು.
ಮಹಿಳಾ ಮೀಸಲಾತಿಗೆ ಮೋದಿ ಬದ್ಧ:
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಹುದು ಎಂಬ ಆತಂಕವನ್ನು ಪ್ರಧಾನಿ ಮೋದಿ ನಿವಾರಿಸಿದ್ದಾರೆ. ಎಲ್ಲ ರಾಜ್ಯಗಳಿಗೂ ಸಮಾನವಾಗಿ ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಪ್ರಸ್ತಾವನೆ ಮೂಲಕ ಪ್ರಾದೇಶಿಕ ಸಮತೋಲನ ಕಾಪಾಡುವ ಪ್ರಯತ್ನ ನಡೆದಿದೆ ಎಂದರು.
ಕನ್ನಡ-ಮರಾಠಿ ಭಾಷೆಗಳು ಸಹೋದರಿಯರಿದ್ದಂತೆ:
ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಮಾತನಾಡಿ, ದೇಶದ ಒಳಗೆ ಮತ್ತು ಹೊರಗೆ ಕೆಲವು ಅವಕಾಶವಾದಿ ಹಾಗೂ ದೇಶವಿರೋಧಿ ಶಕ್ತಿಗಳು ಅರಾಜಕತೆ ಸೃಷ್ಟಿಸಲು ನಿರಂತರ ಪ್ರಯತ್ನ ನಡೆಸುತ್ತಿವೆ. ಸುಳ್ಳನ್ನೇ ಸತ್ಯವನ್ನಾಗಿ ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಪ್ರಜಾಪ್ರಭುತ್ವದ ಮೂಲಕ ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಿ, ಪತನಗೊಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ರಾಜಕೀಯ ಶಕ್ತಿಗಳಿಗೆ ತಕ್ಕ ಪಾಠ ಕಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದರು.