ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸದ ಡೇರಿಗಳನ್ನು ಸೂಪರ್ ಸೀಡ್ ಮಾಡಲು ಸಂಚು

KannadaprabhaNewsNetwork |  
Published : Dec 30, 2024, 01:01 AM IST
29ಕೆಎಂಎನ್ ಡಿ11 | Kannada Prabha

ಸಾರಾಂಶ

ಮನ್ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಸ್ಪರ್ಧಿಸುವ ವಿರೋಧ ಪಕ್ಷದ ಜನಪ್ರತಿನಿಧಿಗಳನ್ನು ಮಟ್ಟ ಹಾಕಲು ಹಾಲು ಉತ್ಪಾದಕರ ಸಂಘಗಳನ್ನು ಸೂಪರ್ ಸೀಡ್ ಮಾಡುವ ಕೆಟ್ಟ ಚಾಳಿ ಬೆಳೆಸಿಕೊಂಡಿದ್ದು, ಸೂಪರ್ ಸೀಡ್ ಮಾಡಲು ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ನಾಗಭೂಷಣ್ ಅವರನ್ನು ಕಾಂಗ್ರೆಸ್ ನಾಯಕರು ಅಸ್ತ್ರವಾಗಿ ಬಳಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡದ ಹಾಲು ಉತ್ಪಾದಕರ ಸಂಘಗಳನ್ನು ಸೂಪರ್ ಸೀಡ್ ಮಾಡಲು ಸಚಿವರು ಮತ್ತು ಶಾಸಕರು ಕುತಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು.

ಪಟ್ಟಣದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನ್ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಸ್ಪರ್ಧಿಸುವ ವಿರೋಧ ಪಕ್ಷದ ಜನಪ್ರತಿನಿಧಿಗಳನ್ನು ಮಟ್ಟ ಹಾಕಲು ಹಾಲು ಉತ್ಪಾದಕರ ಸಂಘಗಳನ್ನು ಸೂಪರ್ ಸೀಡ್ ಮಾಡುವ ಕೆಟ್ಟ ಚಾಳಿಯನ್ನು ಬೆಳೆಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಡೇರಿಗಳನ್ನು ಸೂಪರ್ ಸೀಡ್ ಮಾಡಲು ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ನಾಗಭೂಷಣ್ ಅವರನ್ನು ಕಾಂಗ್ರೆಸ್ ನಾಯಕರು ಅಸ್ತ್ರವಾಗಿ ಬಳಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಮನ್ಮುಲ್‌ನ ಮೆಗಾ ಡೇರಿ ನಿರ್ಮಾಣದಲ್ಲಿ ನಡೆದಿರುವ ಅಕ್ರಮ, ಹಾಲು ನೀರು ಹಗರಣದ ತನಿಖೆಗೆ ತಿಲಾಂಜಲಿ ಹೇಳಿ ತಪ್ಪಿತಸ್ಥ ಆರೋಪಿಗಳನ್ನು ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಅವರ ಪಕ್ಷದ ಶಾಸಕರು ಹಗರಣಗಳ ತನಿಖೆಗೆ ಹಿಂದೇಟು ಹಾಕುತ್ತಿರುವ ಉದ್ದೇಶವೇನು ಎಂದು ಪ್ರಶ್ನಿಸಿದರು.

ಸಹಕಾರ ಕ್ಷೇತ್ರದಲ್ಲಿ ಅತಿಯಾದ ರಾಜಕಾರಣ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ, ಇದರ ವಿರುದ್ಧ ಮುಂದಿನ ದಿನಗಳಲ್ಲಿ ಜೆಡಿಎಸ್ ಹೋರಾಟ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.

ಮನ್ಮುಲ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಸಂಘಗಳ ನಾಮನಿರ್ದೇಶಕ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದು ತಪ್ಪು. ಈ ಬಗ್ಗೆ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರಿಂದ ನಾಮ ನಿರ್ದೇಶಕರ ಮತದಾನದ ಹಕ್ಕು ರದ್ದು ಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ನಾಗಭೂಷಣ್ ವಿರುದ್ಧವು ಸಹ ನ್ಯಾಯಾಲಯದಲ್ಲಿ ಜೆಡಿಎಸ್ ಹೋರಾಟ ನಡೆಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಮನ್ಮುಲ್ ನಿರ್ದೇಶಕ ಚುನಾವಣೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಹೇಶ್, ಯುವ ಘಟಕದ ಕಾರ್ಯಾಧ್ಯಕ್ಷ ನಗರಕೆರೆ ಸಂದೀಪ, ಮುಖಂಡರಾದ ಗುರುದೇವರಹಳ್ಳಿ ಅರವಿಂದ್, ಮುಖಂಡರಾದ ಹೊಸಕೆರೆ ದಯಾನಂದ, ಶಿವಣ್ಣ, ಚಾಮನಹಳ್ಳಿ ರಾಕೇಶ್ ಮತ್ತಿತರ ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ