ಕನ್ನಡಪ್ರಭ ವಾರ್ತೆ ತುಮಕೂರು
ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರು ಹಾಗೂ ಸರ್ಕಾರಿ ನೌಕರರಿಗಾಗಿ ಸೋಮವಾರ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಕಪ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ತಹಸಿಲ್ದಾರ್ ಸಿದ್ದೇಶ್, ಜನಸಾಮಾನ್ಯರಲ್ಲಿ ಸಂವಿಧಾನದ ಆಶಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜ.26 ರಿಂದ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗಾಗಿ ಹಮ್ಮಿಕೊಂಡಿರುವ ಹಲವಾರು ವಿಶೇಷ ಕಾರ್ಯಕ್ರಮಗಳ ಪೈಕಿ ಈ ಕ್ರೀಡಾಕೂಟವೂ ಒಳಗೊಂಡಿದೆ. ಎಲ್ಲ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಶುಭಾಷಣ, ಚರ್ಚಾ, ಪತ್ರ ಚಳುವಳಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಗಿದೆ. ಜಿಲ್ಲಾ ಮಟ್ಟದ ವಿಜೇತರನ್ನು ಫೆ.24 ರಂದು ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಗೌರವಸಲಿದ್ದಾರೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಫೆ.23 ವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸುತ್ತಿರುವ ಜಾಥಾ ಕಾರ್ಯಕ್ರಮಕ್ಕೆ ಅಭೂತಪೂರ್ವ ಯಶಸ್ಸು ದೊರೆತಿದೆ. ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಜಿಲ್ಲೆಯು 1,30,000 ಅಂಕ ಪಡೆದು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಯಶಸ್ಸಿಗೆ ಕಾರಣರಾದ ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು, ಅಧಿಕಾರಿಗಳು ಕಲಾವಿದರು, ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ‍್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್, ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ಪತ್ರಕರ್ತರಿಗಾಗಿ ಕ್ರೀಡಾಕೂಟ ಏರ್ಪಡಿಸಿರುವುದು ಸ್ವಾಗತಾರ್ಹ. ಪತ್ರಕರ್ತ ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಭಾಗವಹಿಸಲು ಉತ್ಸುಕರಿದ್ದು, ಪ್ರತೀ ವರ್ಷ ಇಂತಹ ಕ್ರೀಡಾಕೂಟವನ್ನು ಏರ್ಪಡಿಸಬೇಕೆಂದು ಮನವಿ ಮಾಡಿದರು. ಕ್ರಿಕೆಟ್ ಪಂದ್ಯದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಗಳಿಸಿರುವ ಉತ್ತಮ ಪತ್ರಕರ್ತ ತಂಡ ಜಿಲ್ಲೆಯಲ್ಲಿದೆ ಎಂದು ತಿಳಿಸಿದರಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಪತ್ರಿಕಾ ಪ್ರತಿನಿಧಿಗಳಿಗೆ ಶುಭ ಕೋರಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ಆರ್. ರೂಪಕಲಾ ಉಪಸ್ಥಿತರಿದ್ದರು. ಕ್ರೀಡಾಕೂಟದ ಕೋಚ್ ಇಸ್ಮಾಯಿಲ್ ನಿರೂಪಣೆ ಮಾಡಿದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ್ ವಂದಿಸಿದರು. ತಿಪಟೂರು ತಾಲೂಕು ಶಿಕ್ಷಣ ಇಲಾಖೆ ಶಶಿಕಲಾ ಪ್ರಾರ್ಥನಾ ಗೀತೆ ಹಾಡಿದರು. ಕ್ರೀಡಾಕೂಟದ ತೀರ್ಪುಗಾರರಾಗಿ ನಾಗವಲ್ಲಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಡಾ.ಉಮೇಶ್ ಆಗಮಿಸಿದ್ದರು. ಪತ್ರಕರ್ತ ಕ್ರೀಡಾಪಟುಗಳು, ತಿಪಟೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಶಿಕ್ಷಣ ಇಲಾಖೆಯ ನೌಕರರು ಕ್ರೀಡಾಕೂಟದಲ್ಲಿ ಏರ್ಪಡಿಸಿದ್ದ ಖೋ-ಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.