- ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಬಂಧ ಪೂರ್ವ ಸಿದ್ದತಾ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಇದೇ ಜನವರಿ 26 ರಿಂದ ಫೆಬ್ರವರಿ 24ರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಮಟ್ಟದ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಕರೆಯ ಲಾದ ಪೂರ್ವ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ನಿರ್ದೇಶನದಂತೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಸಂವಿಧಾನ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಜಾಥಾದ ಉದ್ದೇಶ ಎಂದು ಹೇಳಿದ ಅವರು, ಜಾಥಾಕ್ಕೆ ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು. ಜನವರಿ 26 ರಿಂದ ಆರಂಭವಾಗುವ ಜಾಥಾ ಫೆಬ್ರವರಿ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ ತಲುಪಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಕಾರ್ಯಕ್ರಮಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಾಥಾದ ವ್ಯವಸ್ಥೆ ಕುರಿತು ನಿಗಾ ವಹಿಸುವಂತೆ ಸೂಚಿಸಲಾಗಿದೆ. ಸ್ತಬ್ದ ಚಿತ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಪರಿಕಲ್ಪನೆ, ಅವರ ಪ್ರತಿಮೆ, ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಮಾಹಿತಿ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸರ್ಕಾರದ ಐದು ಯೋಜನೆಗಳನ್ನು ಸ್ತಬ್ದ ಚಿತ್ರದಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಅಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲಾಗು ವುದಲ್ಲದೆ, ಪಂಚಾಯಿತಿಯಿಂದ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. 22 ಕೆಸಿಕೆಎಂ 1