ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ರಾಜ್ಯದ ಭೂಹೀನ ಬಡ ಕುಟುಂಬಗಳಿಗೆ ತಲಾ ಐದು ಎಕರೆ ಕೃಷಿ ಭೂಮಿ ಒದಗಿಸಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಅರ್ಹ ಬಡವರಿಗೆ ಹಂಚಿಕೆ ಮಾಡಬೇಕು. ಕೇಂದ್ರ ಸರ್ಕಾರ ಬಡವರಿಗೆ ನಾಲ್ಕು ಕೋಟಿ ಮನೆಗಳನ್ನು ಒದಗಿಸುವ ಯೋಜನೆ ರೂಪಿಸಿದ್ದು, ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸಬಾರದು. ಈಗಾಗಲೇ ಹತ್ತು ವರ್ಷಗಳ ಕಾಲ ಕೇಂದ್ರ ಸಚಿವನಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ಮೂರು ವರ್ಷಗಳ ಕಾಲವೂ ಸಚಿವನಾಗಿ ಮುಂದುವರಿಯಲಿದ್ದೇನೆ. ಎಂ.ವೆಂಕಟಸ್ವಾಮಿ ಅವರನ್ನು ಕೇಂದ್ರ ಸರ್ಕಾರದ ಭಾಗವಾಗಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಆರ್ಪಿಐ ರಾಜ್ಯಾಧ್ಯಕ್ಷ ಸತೀಶ್ ಅವರು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದು, ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಅವರ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಡಾ. ಬಿ. ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿರುವ ಸಂವಿಧಾನವನ್ನು ರಕ್ಷಿಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುವವರು ಮೂರ್ಖರು. ನಾವು ಇರುವವರೆಗೂ ಸಂವಿಧಾನ ಬದಲಾವಣೆಗೆ ಅವಕಾಶ ನೀಡುವುದಿಲ್ಲ. ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಗುಡುಗಿದರು.
ನಗರದ ಹೊಸ ಬಸ್ ನಿಲ್ದಾಣದ ಎದುರು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಆರ್.ಪಿ.ಐ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಕೇಂದ್ರ ಸಚಿವರಾಗಿ ಹತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಭಾಗ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ತತ್ವಗಳನ್ನು ಎತ್ತಿಹಿಡಿಯುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ. ಆರ್ಪಿಐ ಕೇವಲ ದಲಿತ ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಎಲ್ಲ ಜಾತಿ, ಧರ್ಮ ಹಾಗೂ ಸಮುದಾಯದ ಜನರನ್ನು ಒಳಗೊಂಡ ಜಾತ್ಯತೀತ ರಾಜಕೀಯ ಶಕ್ತಿಯಾಗಿದೆ ಎಂದು ಪ್ರತಿಪಾದಿಸಿದರು.
ರಾಜ್ಯದಲ್ಲಿ ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಪ್ರಕರಣಗಳು ಮುಂದುವರಿಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ದಲಿತ ಸಮುದಾಯದವರೇ ರಾಜ್ಯದ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಇಂತಹ ಘಟನೆಗಳಿಗೆ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಿಸಬೇಕು. ಇಲ್ಲವಾದಲ್ಲಿ ಆರ್ಪಿಐ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ರಾಜ್ಯದ ಭೂಹೀನ ಬಡ ಕುಟುಂಬಗಳಿಗೆ ತಲಾ ಐದು ಎಕರೆ ಕೃಷಿ ಭೂಮಿ ಒದಗಿಸಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಅರ್ಹ ಬಡವರಿಗೆ ಹಂಚಿಕೆ ಮಾಡಬೇಕು. ಕೇಂದ್ರ ಸರ್ಕಾರ ಬಡವರಿಗೆ ನಾಲ್ಕು ಕೋಟಿ ಮನೆಗಳನ್ನು ಒದಗಿಸುವ ಯೋಜನೆ ರೂಪಿಸಿದ್ದು, ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸಬಾರದು. ಈಗಾಗಲೇ ಹತ್ತು ವರ್ಷಗಳ ಕಾಲ ಕೇಂದ್ರ ಸಚಿವನಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ಮೂರು ವರ್ಷಗಳ ಕಾಲವೂ ಸಚಿವನಾಗಿ ಮುಂದುವರಿಯಲಿದ್ದೇನೆ. ಎಂ.ವೆಂಕಟಸ್ವಾಮಿ ಅವರನ್ನು ಕೇಂದ್ರ ಸರ್ಕಾರದ ಭಾಗವಾಗಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಆರ್ಪಿಐ ರಾಜ್ಯಾಧ್ಯಕ್ಷ ಸತೀಶ್ ಅವರು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದು, ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಅವರ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಪ್ರವಾಸ ಕೈಗೊಂಡು ವಿವಿಧ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಂಬೇಡ್ಕರ್ ಅವರು ಆರಂಭಿಸಿದ ಸಾಮಾಜಿಕ ಪರಿವರ್ತನೆಯ ಹೋರಾಟದ ರಥವನ್ನು ಮುಂದಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ರಾಜ್ಯದಲ್ಲಿ ಆರ್ಪಿಐ ಎಲ್ಲ ರಾಜಕೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯಾಗಿ ಬೆಳೆಯುವ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿ ಸಮರ್ಥವಾಗಿ ಎದುರಿಸಲಿದೆ. ರಾಜ್ಯ ರಾಜಕಾರಣದಲ್ಲಿ ದಲಿತರಿಗೆ ಸಿಗಬೇಕಾದ ಅವಕಾಶಗಳನ್ನು ತಪ್ಪಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೇರಲು ಅವಕಾಶ ಕಲ್ಪಿಸಿರುವ ವಿಚಾರದಲ್ಲಿ ದಲಿತ ನಾಯಕರಿಗೆ ಅನ್ಯಾಯವಾಗಿದೆ ಎಂಬುದು ನಮ್ಮ ಅಭಿಪ್ರಾಯ. ಡಾ.ಜಿ.ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕಾಣಬೇಕು ಎಂಬುದು ಆರ್ಪಿಐನ ಗುರಿಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಜನರ ಮುಂದೆ ತೆರೆದಿಟ್ಟು, ಪರ್ಯಾಯ ರಾಜಕೀಯ ಶಕ್ತಿಯಾಗಿ ಪಕ್ಷವನ್ನು ಬೆಳೆಸಲು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸಲಾಗುವುದು. ಪಕ್ಷದಲ್ಲಿ ಮಹಿಳೆಯರಿಗೆ ಶೇ.೫೦ರಷ್ಟು ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಮಾತನಾಡುವ ಸಂದರ್ಭದಲ್ಲಿ ಭಾರತದ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ ಅವರು, ದೇಶದ ಆಡಳಿತ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳಿಗಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.ಕಾರ್ಯಕ್ರಮದಲ್ಲಿ ಆರ್ಪಿಐ ರಾಜ್ಯಾಧ್ಯಕ್ಷ ಸತೀಶ್, ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ಹರ್ಷವರ್ಧನ್ಗೌಡ, ಜಿಲ್ಲಾಧ್ಯಕ್ಷ ನಿಟ್ಟೂರು ಬೂದೇಶ್, ಮಹಿಳಾ ಅಧ್ಯಕ್ಷೆ ರಂಜಿತಾ, ಹೆತ್ತೂರು ನಾಗರಾಜು, ಎಚ್.ಕೆ. ಸಂದೇಶ್, ಕೃಷ್ಣದಾಸ್, ದಸಂಸ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.