ಆಡಳಿತ ವ್ಯವಸ್ಥೆಗೆ ಸಂವಿಧಾನವೇ ದಾರಿದೀಪ: ಯು.ಬಿ. ಬಣಕಾರ

KannadaprabhaNewsNetwork | Published : Jan 27, 2025 12:45 AM

ಸಾರಾಂಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡಿವೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ, ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ರಟ್ಟೀಹಳ್ಳಿ: ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ನಮಗೆ ದಾರಿದೀಪವಾಗಿದೆ, ಅದು ಆಡಳಿತ ವ್ಯವಸ್ಥೆಗೆ ಮಾರ್ಗದರ್ಶನ ನೀಡುತ್ತದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಪಟ್ಟಣದ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡಿವೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ, ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ₹2 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಡೆಸ್ಕ್‌ ವಿತರಣೆ ಮಾಡಲಾಗಿದೆ. 22 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ ಹಾಗೂ ಸುಮಾರು 60 ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ನಿರ್ಮಾಣ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಎರಡು ತಾಲೂಕಿನ ಎಲ್ಲ ಶಾಲೆಗಳನ್ನು ಆಧುನಿಕರಣಗೊಳಿಸಿ, ಸ್ಮಾರ್ಟ್‌ಕ್ಲಾಸ್ ನಿರ್ಮಾಣ ಮಾಡಲಾಗುವುದು ಎಂದರು.

ರಟ್ಟೀಹಳ್ಳಿಯಲ್ಲಿ ಒಂದೇ ಸೂರಿನಡಿ ಆಡಳಿತ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ₹8.60 ಕೋಟಿ ವೆಚ್ಚದಲ್ಲಿ ಆಡಳಿತ ಸೌಧ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. 15 ದಿನದಲ್ಲಿ ಟೆಂಡರ್ ಕರೆದು ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಪಟ್ಟಣದಲ್ಲಿ ದಿನದ 24 ಗಂಟೆ ಕುಡಿಯುವ ನೀರಿಗಾಗಿ ₹52 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ 3 ತಿಂಗಳಲ್ಲಿ ಚಾಲನೆ ನೀಡಲಾಗುವುದು. ತಾಲೂಕಿನ ವಿವಿಧ ಹಳ್ಳಿಗಳಿಗೆ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಪೈರನಪಾದ ಕುಡಿಯುವ ನೀರಿನ ಯೋಜನೆ ಪುನಶ್ಚೇತನಗೊಳಿಸಿ ಲೋಕಾರ್ಪಣೆಗೋಳಿಸಲಾಗುವುದು ಹಾಗೂ ಮುಂಬರುವ ದಿನಗಳಲ್ಲಿ ಸರ್ಕಾರದಿಂದ ರಟ್ಟೀಹಳ್ಳಿ ತಾಲೂಕಿನ ಸಮಗ್ರ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್‌ ಕೆ. ಗುರುಬಸವರಾಜ ಮಾತನಾಡಿ, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಹಾಗೂ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಪಂ ಮಾಜಿ ಅಧ್ಯಕ್ಷ ಮಹೇಶ ಗುಬ್ಬಿ, ಜಿಪಂ ಮಾಜಿ ಸದಸ್ಯ ಪಿ.ಡಿ. ಬಸನಗೌಡ್ರ, ರವಿ ಮುದಿಯಪ್ಪನವರ, ಮಹಮ್ಮದ ಹುಸೇನ್ ಖಾಜಿ, ನಾಸೀರಸಾಬ್ ಸೈಕಲ್ಗಾರ, ಮಂಜು ಅಸ್ವಾಲಿ, ಎನ್.ಎಂ. ಸಾಲಿ, ಸಿಪಿಐ ಬಸವರಾಜ ಪಿ.ಎಸ್., ಪಿಎಸ್ಐ ರಮೇಶ ಪಿ.ಎಸ್., ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ, ಪಪಂ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ, ಅಕ್ಷರ ದಾಸೋಹ ಅಧಿಕಾರಿ ಎಚ್.ಎಚ್‌. ಜಾಡರ್, ಕ್ಷೇತ್ರ ಸಮಯನ್ವಾಧಿಕಾರಿ ಎನ್. ಸುರೇಶಕುಮಾರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಮೇಶ ತಳವಾರ, ಮಂಜು ಪೂಜಾರ ಇದ್ದರು.

Share this article