ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ. ಅದಕ್ಕೆ ನಾವೆಲ್ಲರೂ ಗೌರವ ನೀಡಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶೈಲಶ್ರೀ ಹೇಳಿದರು.
ತಾಲೂಕಿನ ಕುನ್ನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.ಎಲ್ಲರಿಗೂ ಸಮಾನತೆ, ಸ್ವಾತಂತ್ರ‍್ಯದ ಹಕ್ಕನ್ನು ನೀಡಿರುವ ಸಂವಿಧಾನ ಸುಲಭವಾಗಿ ರಚನೆಯಾಗಿಲ್ಲ. ಕರಡು ಸಮಿತಿ ಅಧ್ಯಕ್ಷರಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಅತ್ಯಂತ ವ್ಯವಸ್ಥಿತವಾಗಿ ದೇಶದ ನಾಗರಿಕರೆಲ್ಲರಿಗೂ ಸಮಾನತೆ ಕಟ್ಟಿಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು, ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸಂವಿಧಾನ ಜಾಗೃತಿ ಕುರಿತಾಗಿ ವಿಡಿಯೋ ಮೂಲಕ ಪ್ರಾತ್ಯಕ್ಷಿಕೆ ನೀಡಲಾಯಿತು.
ಗ್ರಾಪಂ ಸದಸ್ಯ ಲಕ್ಷ್ಮಣ ಬೆಂಡಲಗಟ್ಟಿ ಸ್ವಾಗತಿಸಿದರು. ದೇವರಾಜ ಲಮಾಣಿ ನಿರೂಪಿಸಿದರು.