ಸಂವಿಧಾನ ತಿದ್ದುಪಡಿ: ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ: ಡಾ. ಬಸವರಾಜ್ ಕ್ಯಾವಟರ್

KannadaprabhaNewsNetwork |  
Published : Nov 27, 2026, 02:15 AM IST
ಸಂವಿಧಾನ ಗೌರವ ದಿವಸ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಸಂವಿಧಾನ ತಿದ್ದುಪಡಿಗಳ ಇತಿಹಾಸವನ್ನು ಕಾಂಗ್ರೆಸ್ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಆಡಳಿತದಲ್ಲಿ ನಿರಂತರ ಅನ್ಯಾಯವಾಗಿದೆ.

ಸಂವಿಧಾನ ಗೌರವ ದಿವಸ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕೊಪ್ಪಳ

ಸಂವಿಧಾನ ತಿದ್ದುಪಡಿಗಳ ಇತಿಹಾಸವನ್ನು ಕಾಂಗ್ರೆಸ್ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಆಡಳಿತದಲ್ಲಿ ನಿರಂತರ ಅನ್ಯಾಯವಾಗಿದೆ ಎಂದು ಬಿಜೆಪಿ ಮುಖಂಡ ಡಾ. ಬಸವರಾಜ್ ಕ್ಯಾವಟರ್ ಆರೋಪಿಸಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಗೌರವ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನಡೆಸಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ. ದೆಹಲಿಯ 26 ಅಲಿಪುರ ರಸ್ತೆಯಲ್ಲಿರುವ ಅವರ ನಿವಾಸವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಪರಿವರ್ತಿಸುವ ಪ್ರಸ್ತಾಪವನ್ನೂ ಅಂದಿನ ಪ್ರಧಾನಿ ನೆಹರು ತಿರಸ್ಕರಿಸಿದ್ದರು ಎಂದು ದೂರಿದರು.

ನೆಹರು- ಗಾಂಧಿ ಕುಟುಂಬದವರಿಗೆ ಸ್ಮಾರಕ ನಿರ್ಮಿಸಲು ಆದ್ಯತೆ ನೀಡಿದ ಕಾಂಗ್ರೆಸ್, ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಲು ಅಗತ್ಯವಾದ ಗೌರವ ನೀಡಲಿಲ್ಲ. 1952ರ ಲೋಕಸಭಾ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಲು ಕಾಂಗ್ರೆಸ್ ಸಂಚು ರೂಪಿಸಿತ್ತು ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರ ಪಂಚತೀರ್ಥ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಸ್ಮಾರಕಗಳನ್ನಾಗಿ ರೂಪಿಸಿದೆ. ಅವರ ಬರಹ ಮತ್ತು ಭಾಷಣಗಳನ್ನು ಡಿಜಿಟಲೀಕರಣಗೊಳಿಸಿ ಪ್ರಕಟಿಸುವ ಮೂಲಕ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಿದೆ. ಸಂವಿಧಾನ ಗೌರವ ದಿನ ಆಚರಣೆಯ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಬಿಜೆಪಿ ಮಾಡಿದೆ ಎಂದರು.

ಎಸ್ಸಿ ಮೋರ್ಚಾ ಅಧ್ಯಕ್ಷ ಗಣೇಶ್ ಹೊರತಟ್ನಾಳ, ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಪಿ- ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ದಲಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ₹52 ಸಾವಿರ ಕೋಟಿಗೂ ಅಧಿಕ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ನಗರದ ಬುದ್ಧ, ಬಸವ, ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಎಸ್‌ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ನಾಯಕ ಕಾರ್ಯಕ್ರಮದ ಕುರಿತು ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ ಮಾತನಾಡಿ, ಸಂವಿಧಾನದ ಆಶಯಗಳ ರಕ್ಷಣೆಗೆ ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.

ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ನಾಡಿಗೇರಿ, ಸುನಿಲ್ ಹೆಸರೂರು, ಶಿವು ಅರಿಕೇರಿ, ವೀರಭದ್ರಪ್ಪ ನಾಯಕ, ವಿಜಯ್ ತಾಳಕೇರಿ, ಮಹಾಂತೇಶ ಪಾಟೀಲ್, ಮೌನೇಶ ನಡೆಸುಗೂರು, ಅಶೋಕ್ ಗುಳದಳ್ಳಿ, ಕೆ.ಎಸ್. ಹನುಮಂತಪ್ಪ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮ: ರಿಜ್ವಾನ್ ಅರ್ಷದ್
ಬ್ಯಾಂಕುಗಳು ಆಹಾರ ಸಂಸ್ಕರಣೆಗೆ ಪ್ರೋತ್ಸಾಹ ನೀಡಿ: ಪ್ರತೀಕ್ ಬಾಯಲ್‌