ಎಚ್.ಕಲ್ಪನಹಳ್ಳಿಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಕೇಂದ್ರ ನಿರ್ಮಾಣ

KannadaprabhaNewsNetwork |  
Published : Nov 19, 2026, 02:00 AM IST
ಕ್ಯಾಪ್ಷನ16ಕೆಡಿವಿಜಿ38 ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡಾಳು ಗ್ರಾಮದಲ್ಲಿ  ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಸಚಿವ ಕೆ.ಎಸ್‌.ಬಸವಂತಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರ ಹಿತದೃಷ್ಟಿಯಿಂದ ತಾಲೂಕಿನ ಎಚ್.ಕಲ್ಪನಹಳ್ಳಿ ಗ್ರಾಮದ ಸಮೀಪ ₹280 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ದಾವಣಗೆರೆ- ಚಿತ್ರದುರ್ಗ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.

- ಶೀಘ್ರದಲ್ಲೇ ಭೂಮಿಪೂಜೆ: ಸಚಿವ ಬಸವಂತಪ್ಪ । ಬರಗಾಲದಲ್ಲಿ ರೈತರಿಂದ ಸಾಲ ವಸೂಲಾತಿ ನಿಲ್ಲಿಸಲು ಮನವಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರ ಹಿತದೃಷ್ಟಿಯಿಂದ ತಾಲೂಕಿನ ಎಚ್.ಕಲ್ಪನಹಳ್ಳಿ ಗ್ರಾಮದ ಸಮೀಪ ₹280 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ದಾವಣಗೆರೆ- ಚಿತ್ರದುರ್ಗ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ತಿಳಿಸಿದರು.

ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗುಡಾಳು ಗ್ರಾಮದಲ್ಲಿ ಸೋಮವಾರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ರೈತರ ಅನುಕೂಲಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ತಾವು ಸರ್ಕಾರದ ಮೇಲೆ ಒತ್ತಡ ಹೇರಿದ್ದರ ಫಲವಾಗಿ, ಎಚ್.ಕಲ್ಪನಹಳ್ಳಿ ಬಳಿ ಶಿವಮೊಗ್ಗ ಹಾಲು ಒಕ್ಕೂಟದ ಮಾದರಿಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ₹280 ಕೋಟಿ ಮಂಜೂರು ಮಾಡಿದೆ. ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಹಕಾರ ಸಚಿವರು ಹಾಗೂ ತಾವು ಭೂಮಿಪೂಜೆ ನೆರವೇರಿಸಲಿದ್ದೇವೆ. ಇದರಿಂದ ಎರಡೂ ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕೊಳವೆಬಾವಿ ಕೊರೆಸಿ ಕೃಷಿ ಮಾಡುತ್ತಿರುವ ಹಾಗೂ ಅಡಕೆ ತೋಟ ಬೆಳೆಸಿರುವ ರೈತರು ಸಾಲ ಮರುಪಾವತಿಸಲು ಕಷ್ಟಪಡುತ್ತಿದ್ದಾರೆ. ಹೀಗಾಗಿ, ಸಹಕಾರ ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಈಗಾಗಲೇ ಸಾಲದ ಮಿತಿಯನ್ನುರೂ.3 ಲಕ್ಷದಿಂದ ರೂ.5 ಲಕ್ಷದವರೆಗೆ ಹೆಚ್ಚಿಸಿದ್ದು, ಈ ಸೌಲಭ್ಯವನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಈ ವರ್ಷ ರೈತರಿಂದ ಯಾವುದೇ ಸಾಲ ವಸೂಲಾತಿ ಮಾಡಬಾರದು. ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ಮೈಕ್ರೋಫೈನಾನ್ಸ್ ಕಂಪನಿಗಳು ಸಹ ಸಾಲ ಮರುಪಾವತಿಗೆ ಒತ್ತಡ ಹೇರಬಾರದು. ಸಾಲ ಮರುಪಾವತಿ ಅನಿವಾರ್ಯವಾದರೂ ಅಸಲು ಮೊತ್ತಕ್ಕೆ ಮಾತ್ರ ಸೀಮಿತಗೊಳಿಸಿ, ದುಪ್ಪಟ್ಟು ಬಡ್ಡಿ ಅಥವಾ ದಂಡ ಬಡ್ಡಿ ವಿಧಿಸಬಾರದು ಎಂದು ಒತ್ತಾಯಿಸಿದರು.

ಗುಡಾಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಮೂರು-ನಾಲ್ಕು ಕೊಳವೆಬಾವಿಗಳನ್ನು ಕೊರೆಸಿ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು. ಈ ಕುರಿತು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಕ್ಷತೆಯನ್ನು ಗುಡಾಳು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಕಲ್ಲೇಶಪ್ಪ ವಹಿಸಿದ್ದರು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಜೆ.ಆರ್.ಷಣ್ಮುಖಪ್ಪ, ನಿರ್ದೇಶಕರಾದ ಎಚ್.ಕೆ.ಬಸವಬಸಪ್ಪ, ಜೆ.ಎಸ್.ವೇಣುಗೋಪಾಲ ರೆಡ್ಡಿ, ಬಿ.ಶೇಖರಪ್ಪ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ, ನಿರ್ದೇಶಕ ಕೆ.ಜಿ.ಸುರೇಶ್, ಶಿವಮೊಗ್ಗ-ದಾವಣಗೆರೆ- ಚಿತ್ರದುರ್ಗ ಹಾಲು ಒಕ್ಕೂಟದ ಉಪಾಧ್ಯಕ್ಷ ಚೇತನ್ ಎಸ್.ನಾಡಿಗರ, ಎಚ್.ಬಿ.ಭೂಮೇಶ್ವರಪ್ಪ ಸೇರಿದಂತೆ ಸಹಕಾರ ಸಂಘಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- - -

-16ಕೆಡಿವಿಜಿ38:

ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಸಚಿವ ಬಸವಂತಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ