ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ: ಸಿಎಂ

KannadaprabhaNewsNetwork | Published : Mar 11, 2024 1:19 AM

ಸಾರಾಂಶ

ಹೊಸಕೋಟೆ: ಸಮ ಸಮಾಜ ನಿರ್ಮಾಣ ಎಂದು ವಿರೋಧ ಪಕ್ಷದವರು ಬಾಯಿ ಮಾತಲ್ಲಿ ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೊಸಕೋಟೆ: ಸಮ ಸಮಾಜ ನಿರ್ಮಾಣ ಎಂದು ವಿರೋಧ ಪಕ್ಷದವರು ಬಾಯಿ ಮಾತಲ್ಲಿ ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಸುಮಾರು 600 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳನ್ನ ಸಹಿಸಿಕೊಳ್ಳಲಾಗದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಆದರೆ ಸುಳ್ಳು ಹೇಳಿಕೊಂಡು ಟೀಕೆ ಮಾಡುವ ಬದಲಾಗಿ ವಾಸ್ತವ ಪರಿಸ್ಥಿತಿಯನ್ನ ತಿಳಿಸಬೇಕು. ಬಿಜೆಪಿ ಹಾಗೂ ಜೆಡಿಎಸ್ ಅವರಿಗೆ ಸುಳ್ಳೇ ಮನೆದೇವರಾಗಿದೆ. ಅವರಿಗೆ ಸತ್ಯ ಎನ್ನುವುದೇ ಗೊತ್ತಿಲ್ಲ ಎಂದು ಹೇಳಿದರು.

1.23 ಲಕ್ಷ ಕೋಟಿ ಅಭಿವೃದ್ಧಿಗೆ:

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಭರವಸೆ ಕೊಟ್ಟಾಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಾಧ್ಯವೇ ಇಲ್ಲ ಅಂದಿದ್ದರು. ಹಾಗೊಂದು ವೇಳೆ ಕೊಟ್ಟರೆ ಸರ್ಕಾರ ದಿವಾಳಿ ಆಗುತ್ತೆ ಎಂದಿದ್ದರು. ಆದರೆ ನಾವು 36 ಸಾವಿರ ಕೋಟಿಯನ್ನ ಗ್ಯಾರಂಟಿ ಯೋಜನೆಗಳನ್ನು ಖರ್ಚು ಮಾಡಿದ್ದೇವೆ. ಸರ್ಕಾರ ಬಂದು 9 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. 24-25ನೇ ಸಾಲಿನ ಬಜೆಟ್‌ನಲ್ಲಿ 52.9 ಸಾವಿರ ಕೋಟಿ ಗ್ಯಾರಂಟಿಗೆ 68 ಸಾವಿರ ಕೋಟಿ ಅಭಿವೃದ್ಧಿಗೆ ಒಟ್ಟು 1.23 ಸಾವಿರ ಕೋಟಿ ಅಭಿವೃದ್ಧಿ ಕಾರ್ಯಗಳಿಗೆ ಇಟ್ಟಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ಸುಧಾಕರ್, ಎನ್.ಎಸ್.ಬೋಸರಾಜು, ಬೈರತಿ ಸುರೇಶ್, ಶಿವಾನಂದ ಪಾಟೀಲ್, ಶಾಸಕರಾದ ಶರತ್ ಬಚ್ಚೇಗೌಡ, ನೆಲಮಂಗಲ ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ರೇವಣ್ಣ ಇತರರಿದ್ದರು.

ಬಾಕ್ಸ್‌..........

ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ ಎಂದು ಹೇಳಿ ಜನರಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಮಾಡಿಲ್ಲ. ಬಿಜೆಪಿಯವರು ಜನಧನ್ ಖಾತೆಯನ್ನು ತೆರೆಸಿದರು. ಆದರೆ ಹಣ ಹಾಕಿಲ್ಲ. ಆದರೆ ನಾವು ಅವರು ತೆರೆಸಿದ ಖಾತೆಗೆ ತಿಂಗಳಿಗೆ 2000 ರುಪಾಯಿಗಳನ್ನು ಹಾಕುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಗ್ಯಾರಂಟಿಯನ್ನು ಈಗ ಕೇಂದ್ರದಲ್ಲಿ ಮೋದಿ ಗ್ಯಾರಂಟಿ ಎಂದು ಕಾಪಿ ಮಾಡಿದ್ದಾರೆ. ಆದರೆ ಸರ್ಕಾರ ನೀಡಿರುವ ಗ್ಯಾರಂಟಿಗಳಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದ್ದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ಕೊಡಬೇಕು ಎಂದು ಹೇಳಿದರು.

ಫೋಟೋ : 10 ಹೆಚ್‌ಎಸ್‌ಕೆ 2

ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.

Share this article