ಜೂನ್‌ಗೆ ಹುಬ್ಬಳ್ಳಿ ಧಾರವಾಡ ಬೈಪಾಸ್‌ ರಸ್ತೆ ನಿರ್ಮಾಣ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

KannadaprabhaNewsNetwork | Published : Dec 24, 2024 12:47 AM

ಸಾರಾಂಶ

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ಕೂಡ ನಿರ್ಮಿಸಲಾಗುತ್ತಿದೆ.

ಹುಬ್ಬಳ್ಳಿ:

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುದಾನ ದೊರೆತಿದೆ. ಬೈಪಾಸ್ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದೆ. ರಸ್ತೆ ನಿರ್ಮಾಣ ಕಾಮಗಾರಿಯು 2025ರ ಜೂನ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ಕೂಡ ನಿರ್ಮಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ನೇಕಾರನಗರ, ತಾರಿಹಾಳ ಹಾಗೂ ಇತರೆಡೆ ಕೆಲವು ವರ್ಷಗಳಿಂದ ಹೆದ್ದಾರಿಯ ಪಕ್ಕದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಬೇರೆಡೆ ತೆರಳುವಂತೆ ಸೂಚಿಸಲಾಗಿದೆ. ಅವರಿಗೆ ಪರಿಹಾರ ಧನ ವಿತರಿಸಲಾಗುವುದು ಎಂದರು.

ಸ್ವಾಗತ ಫಲಕ ಅಳವಡಿಕೆ:

ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಹೆದ್ದಾರಿಯಿಂದ ಹುಬ್ಬಳ್ಳಿ ನಗರಕ್ಕೆ ಆಗಮಿಸುವವರಿಗೆ ಅತ್ಯಾಕರ್ಷಕ ಹುಬ್ಬಳ್ಳಿ ನಗರಕ್ಕೆ ಸ್ವಾಗತ ಎನ್ನುವ ಫಲಕ ಅಳವಡಿಸಲಾಗುತ್ತದೆ. ಅದರ ಜತೆಗೆ ವೃತ್ತವನ್ನು ನಿರ್ಮಿಸಿ, ಪೌಂಟೇನ್ ಮಾದರಿ ಕಟ್ಟಲು ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆದ್ದಾರಿ ನಿರ್ಮಾಣಕ್ಕೆ ಮಹಾನಗರ ಪಾಲಿಕೆಯ ಸಹಕಾರ ಕೂಡ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಡಿಸಿಪಿ ರವೀಶ್ ಆರ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭುವನೇಶ್ವರ ಕುಮಾರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this article