ಹುಲಗಿಯಲ್ಲಿ ಆತ್ಯಾಧುನಿಕ ಶೌಚಾಲಯ ನಿರ್ಮಾಣಕ್ಕೆ ಅಸ್ತು

KannadaprabhaNewsNetwork |  
Published : Jan 10, 2026, 02:30 AM IST
ದದದದ | Kannada Prabha

ಸಾರಾಂಶ

80 ಶೌಚಾಲಯಗಳನ್ನು ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದಿಂದ ₹3.5 ಕೋಟಿ ವೆಚ್ಚದಲ್ಲಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ₹40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ

ಸೋಮರಡ್ಡಿ ಅಳವಂಡಿ ಕೊಪ್ಪಳ

ಲಕ್ಷ ಲಕ್ಷ ಭಕ್ತರು ಸೇರುವ ಹುಲಿಗೆಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡುವುದೇ ದೊಡ್ಡ ಸವಾಲಿನ ಕೆಲಸವಾಗಿದೆ. ಹೀಗಾಗಿ ಈಗ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಆತ್ಯಾಧುನಿಕ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಶೀಘ್ರ ನೂರಕ್ಕೂ ಹೆಚ್ಚು ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ.

ಇದಕ್ಕಾಗಿ ಗೋಕರ್ಣ ಮಾದರಿ ಅನುಸರಿಸಲಾಗುತ್ತಿದ್ದು, ಈಗಾಗಲೇ ಶೌಚಾಯ ನಿರ್ಮಾಣಕ್ಕೆ ಜಿಲ್ಲಾಡಳಿತ ಮತ್ತು ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರವೂ ಸಮ್ಮತಿ ನೀಡಿದ್ದು, ಇನ್ನೇನು ಟೆಂಡರ್ ಪ್ರಕ್ರಿಯೇ ಮುಗಿಯುತ್ತಿದ್ದಂತೆ ಶೌಚಾಲಯ ನಿರ್ಮಾಣವಾಗಲಿದೆ.

ಇದಕ್ಕಾಗಿ ದೇವಸ್ಥಾನ ಅಭಿವೃದ್ಧಿಗಾಗಿ ರೂಪಗೊಂಡಿರುವ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಮೊದಲ ಹಂತದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದೆ. ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 80 ಶೌಚಾಲಯ, ಸ್ನಾನಗೃಹ ಹಾಗೂ ಸುಲಭ ಶೌಚಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದರಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಇರುತ್ತದೆ. ಇವುಗಳನ್ನು ಎರಡು, ಮೂರು ನಿಗದಿತ ಸ್ಥಳಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದಲ್ಲದೆ ಖಾಸಗಿ ಸಹಭಾಗಿತ್ವದಲ್ಲಿಯೂ ಸುಮಾರು 20 ಶೌಚಾಲಯ, ಸ್ನಾನಗೃಹ ಸೇರಿದಂತೆ ಪ್ರತ್ಯೇಕವಾಗಿ ಸುಲಭ ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ.

80 ಶೌಚಾಲಯಗಳನ್ನು ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದಿಂದ ₹3.5 ಕೋಟಿ ವೆಚ್ಚದಲ್ಲಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ₹40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈ ಮೂಲಕ ಹುಲಿಗೆಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಈಗಿರುವ ಬಯಲು ಶೌಚಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತ ಮುಂದಾಗಿದೆ.

ನೀರು ಪೂರೈಕೆ:ತುಂಗಭದ್ರಾ ನದಿ ಪಕ್ಕದಲ್ಲಿಯೇ ಇದ್ದರೂ ಹುಲಿಗೆಮ್ಮ ದೇವಸ್ಥಾನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಜಾತ್ರೆಯ ವೇಳೆಯಲ್ಲಿ ನಾಲ್ಕಾರು ಲಕ್ಷ ಭಕ್ತರು ಆಗಮಿಸುತ್ತಾರೆ. ಹೀಗಾಗಿ, ಈ ಸಮಯದಲ್ಲಿ ನೀರಿನ ಅಭಾವ ಆಗಬಾರದು ಎಂದು ತುಂಗಭದ್ರಾ ಜಲಾಶಯದ ಹಿನ್ನೀರು ಭಾಗದಿಂದ ನೀರು ಪೂರೈಕೆಯ ಯೋಜನೆ ಜಾರಿ ಮಾಡಲಾಗುತ್ತದೆ. ಇದಕ್ಕಾಗಿ ಯೋಜನೆ ರೂಪಿಸಿದ್ದು, ಮುಂದಿನ 30 ವರ್ಷಗಳಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯ ಹೆಚ್ಚಳವನ್ನು ಅಂದಾಜಿಸಿ,ಅದರಂತೆಯೇ ಯೋಜನೆ ರೂಪಿಸಲಾಗಿದೆ.

ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದಿಂದ 80 ಶೌಚಾಲಯ, ಸ್ನಾನಗೃಹ ಮತ್ತು ಖಾಸಗಿ ಸಹಭಾಗಿತ್ವದಲ್ಲಿ 20 ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣ ಮಾಡುವುದಕ್ಕೆ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ