ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ಸುಮಾರು 20 ವರ್ಷಗಳಿಂದ ಎಸ್ಸಿ, ಎಸ್ಟಿ ಸಮುದಾಯದವರಿಗೆ ನಿವೇಶನಗಳನ್ನು ಮಂಜೂರು ಮಾಡಲಾಗುತ್ತಿದೆ. ಆದರೂ, ಅವುಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿರಲಿಲ್ಲ. ಇದರಿಂದ ಫಲಾನುಭವಿಗಳು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಬಡಾವಣೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಈ ಮಾದರಿಯ ಯೋಜನೆ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಸುಮಾರು ₹20 ಕೋಟಿ ಅನುದಾನ ಬಳಸಿಕೊಂಡು ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದೆ. ಬಡಾವಣೆಗಳ ಅಭಿವೃದ್ಧಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದ್ದು, ಫಲಾನುಭವಿಗಳ ಆಯ್ಕೆ ಮತ್ತು ನಿವೇಶನ ಹಂಚಿಕೆ ಕಾರ್ಯವನ್ನು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಗಳಂತಹ ಸ್ಥಳೀಯ ಸಂಸ್ಥೆಗಳು ಪ್ರಸ್ತುತ ನಿಯಮಾವಳಿಗಳ ಪ್ರಕಾರ ನಡೆಸಲಿವೆ. ಈ ಪ್ರಕ್ರಿಯೆಯಲ್ಲಿ ಲೋಕೋಪಯೋಗಿ ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 42 ಎಕರೆ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಪಾಶ್ಚಾಪುರ ಗ್ರಾಮ ಪಂಚಾಯಿತಿಯ ಗುಮಚನಮರಡಿ, ಹುಕ್ಕೇರಿ ತಾಲೂಕಿನ ಹರಗಾಪುರ, ಮೂಡಲಗಿ ತಾಲೂಕಿನ ಅರಬಾವಿ, ಸವದತ್ತಿ ಸೇರಿದಂತೆ ಹಲವು ಪ್ರದೇಶಗಳು, ಬಳ್ಳಾರಿ ಜಿಲ್ಲೆಯ ಕುರುಗೋಡು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದರು.ಪ್ರತಿ ಬಡಾವಣೆಯಲ್ಲೂ ಯೋಜನಾ ಪ್ರದೇಶದ ವಿಸ್ತೀರ್ಣಕ್ಕೆ ಅನುಗುಣವಾಗಿ ನಿವೇಶನ ವಿನ್ಯಾಸ, ರಸ್ತೆ, ಚರಂಡಿ, ಓವರ್‌ಹೆಡ್ ಟ್ಯಾಂಕ್, ಕುಡಿಯುವ ನೀರಿನ ಸರಬರಾಜು, ಬೀದಿ ದೀಪ, ಪಾರ್ಕಿಂಗ್ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒಳಗೊಂಡ ನಕ್ಷೆಗಳನ್ನು ಸಿದ್ಧಪಡಿಸಿ, ಅಗತ್ಯ ಅನುಮೋದನೆಗಳನ್ನು ಪಡೆದುಕೊಳ್ಳಲಾಗುತ್ತದೆ. ಯೋಜನೆಯು ಯಶಸ್ವಿಯಾದ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 1000 ಎಕರೆ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರರು ಉಪಸ್ಥಿತರಿದ್ದರು.