ಎಚ್ಎಂಪಿವಿ ಲಕ್ಷಣಗಳಿದ್ದಲ್ಲಿ ವೈದ್ಯರನ್ನು ಸಂಪರ್ಕಿಸಿ

KannadaprabhaNewsNetwork |  
Published : Jan 08, 2025, 12:16 AM IST
ಸಭೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ | Kannada Prabha

ಸಾರಾಂಶ

ರಾಜ್ಯದಲ್ಲಿ ಎಚ್ಎಂಪಿವಿ ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿ ಎಚ್ಎಂಪಿವಿ ಸೋಂಕು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ವಯ ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು. ಕೈಗಳನ್ನು ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್‌ನಿಂದ ತೊಳೆದುಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು. ಬಳಸಿದ ಟಿಶ್ಯೂ, ಕರವಸ್ತ್ರವನ್ನು ಪುನರ್ ಬಳಕೆ ಮಾಡಬಾರದು. ಅನಾರೋಗ್ಯದ ಲಕ್ಷಣಗಳಿದ್ದವರು ಸಭೆ-ಸಮಾರಂಭದಲ್ಲಿ ಭಾಗವಹಿಸದಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಶಾಲಾ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುವ ಸಾಧ್ಯತೆಯಿರುವುದರಿಂದ ಶೀತ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಬಳಿ ಕರೆದೊಯ್ದು ಸಕಾಲದಲ್ಲಿ ಚಿಕಿತ್ಸೆ ಕೊಡಿಸಬೇಕು. ರೋಗ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದೆ ಮನೆಯಲ್ಲೇ ಆರೈಕೆ ಮಾಡುವ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್ ಅವರಿಗೆ ಸೂಚಿಸಿದರು. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಪ್ರತ್ಯೇಕ ವಾರ್ಡನ್ನು ಮೀಸಲಿಡಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಸಭೆಗೆ ಮಾಹಿತಿ ನೀಡುತ್ತಾ, ಆರೋಗ್ಯ ಇಲಾಖೆಯ ವರದಿಯನುಸಾರ ರೋಗವು ಸಾಮಾನ್ಯವಾದ ಕೆಮ್ಮು, ಶೀತ, ಜ್ವರ, ಮೂಗು ಕಟ್ಟುವುದು, ತಲೆ ನೋವಿನಂತಹ ಲಕ್ಷಣಗಳನ್ನು ಹೊಂದಿರುತ್ತದೆ. ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಈ ರೋಗ ಲಕ್ಷಣಗಳು ಕಂಡು ಬರುತ್ತದೆ. ರಾಜ್ಯದ ಬೆಂಗಳೂರಿನ ಖಾಸಗಿ ಆರೋಗ್ಯ ಕೇಂದ್ರದಲ್ಲಿ 2 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣದಲ್ಲಿ ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದೊಂದು ಪ್ರಕರಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಬಗ್ಗೆ ತಿಳಿದು ಬಂದಿದೆ ಎಂದು ಹೇಳಿದರು. ವೈರಸ್‌ನಿಂದ ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟಾಗುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಬ್ರಾಂಕೈಟೀಸ್ ಅಥವಾ ನ್ಯೂಮೋನಿಯಾಕ್ಕೆ ಕಾರಣವಾಗಬಹುದು. ವಿಶೇಷವಾಗಿ ಚಿಕ್ಕಮಕ್ಕಳು, ವೃದ್ಧರು ಸೇರಿದಂತೆ ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ವ್ಯಕ್ತಿಗಳಲ್ಲಿ ಈ ರೋಗ ಹೆಚ್ಚಾಗಿ ಕಂಡು ಬರುತ್ತದೆ. ಸೋಂಕಿನ ಬಗ್ಗೆ ಸಾರ್ವಜನಿಕರು ಯಾವುದೇ ಭಯ-ಆತಂಕ ಪಡಬೇಕಿಲ್ಲ. ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಸೂರಿಗಾಗಿ ₹4 ಲಕ್ಷ ಅನುದಾನ: ಸಚಿವ ಜಮೀರ್ ಅಹಮದ್
ಗುರುವೇ ಗತಿ ಎಂದಾಗ ಸಕಲ ಜ್ಞಾನ ಸಿಗಲು ಸಾಧ್ಯ: ಗುರುರಾಜ ಗುರೂಜಿ