ಕನ್ನಡಪ್ರಭ ವಾರ್ತೆ ಗದಗ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್(ಗಣಿ) ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಲೈಸನ್ಸಿಂಗ್ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಅಧಿಕ ಪ್ರಮಾಣದ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಚಲಾಯಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುವವರನ್ನು ಸರಿದಾರಿಗೆ ತರಬೇಕು. ದಂಡ ವಿಧಿಸಿದ ನಂತರ ಅದನ್ನು ಸಂಬಂಧಿಸಿದ ವ್ಯಕ್ತಿಯ ಖಾತೆಯಲ್ಲಿ ಭೋಜಾ ದಾಖಲಿಸಬೇಕು. ಪದೇ ಪದ ತಪ್ಪೆಸಗಿದಲ್ಲಿ ಅವರನ್ನು ಗಡಿಪಾರು ಶಿಕ್ಷೆಗೆ ಒಳಪಡಿಸಲು ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗುವಂತೆ ಸೂಚಿಸಿದರು.ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಅಕ್ರಮ ಮರಳು, ಕಲ್ಲು ಗಣಿಗಾರಿಕೆ ತಡೆಗೆ ಮುಂದಾಗಬೇಕು. ಈ ಮೂಲಕ ಸಾರ್ವಜನಿಕ ಆಸ್ತಿ ಸಂರಕ್ಷಣೆ ಮಾಡಬೇಕು ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆ ಉಳಿಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರ ಮೇಲೆ ನಿರಂತರ ನಿಗಾ ವಹಿಸಬೇಕು. ವಾಹನಗಳ ತಪಾಸಣೆ ನಿಯಮಿತವಾಗಿ ಸಾರಿಗೆ ಅಧಿಕಾರಿಗಳು ಮಾಡಬೇಕು. ಓವರ ಲೋಡ್ ವಾಹನಗಳಿಗೆ ನಿಯಮಾನುಸಾರ ದಂಡ ವಿಧಿಸುವ ಮೂಲಕ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ಸರ್ಕಾರದ ಮಾರ್ಗಸೂಚಿಗಳನ್ವಯ ಗಣಿಗಾರಿಕೆ ಮಾಡುವವರಿಗೆ ಅವಕಾಶ ನೀಡಬೇಕು. ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ತಪ್ಪಿದ್ದಲ್ಲ ಎಂಬುದನ್ನು ಮನವರಿಕೆ ಮಾಡಿಸುವ ಕಾರ್ಯ ಇಲಾಖಾಧಿಕಾರಿಗಳಿಂದ ಆಗಬೇಕು ಎಂದರು.
ಉಪ ವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಇದ್ದರು.