ಅರ್ಜಿ ವಿಲೇವಾರಿ ಆಗುವವರೆಗೆ ನಿರಂತರ ಪರಿಶೀಲನೆ: ಸಿ.ಎನ್. ಶ್ರೀಧರ

KannadaprabhaNewsNetwork |  
Published : Sep 06, 2026, 02:30 AM IST
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಉದ್ಘಾಟಿಸಿದರು.  | Kannada Prabha

ಸಾರಾಂಶ

ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಪ್ರಜಾಸೇವಾ ಅಭಿಯಾನ ಜನಸಂಪರ್ಕ ಸಭೆ ನಡೆಯಿತು. ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಅರಣ್ಯ ಹಾಗೂ ಕೃಷಿ ಇಲಾಖೆಗಳಿಗೆ ಸಂಬಂಧಿಸಿದಂತೆ ನೂರಾರು ಅರ್ಜಿಗಳು ಸಲ್ಲಿಕೆಯಾದವು.

ಗದಗ: ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಯನ್ನು ಕೇವಲ ಸ್ವೀಕರಿಸಿ ಅಲ್ಲಿಗೇ ಕೈಬಿಡದೆ, ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವ ವರೆಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಪ್ರಜಾಸೇವಾ ಅಭಿಯಾನ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರ ಅಹವಾಲುಗಳ ಮೇಲೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಡಳಿತವು ಪ್ರತಿ ಶನಿವಾರ ಪ್ರಗತಿ ಪರಿಶೀಲನೆ ನಡೆಸಲಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ನೇರವಾಗಿ ಜನರ ಬಳಿಗೆ ಹೋಗಿ ಸೇವೆ ಒದಗಿಸುವುದು ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳು ಸರ್ಕಾರಿ ಯೋಜನೆಗಳಿಂದ ವಂಚಿತರಾಗಬಾರದು. ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸಲು ಜನ ಸಂಪರ್ಕ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಧ್ಯವರ್ತಿಗಳ ಮೊರೆ ಹೋಗದೆ, ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಅರಣ್ಯ ಹಾಗೂ ಕೃಷಿ ಇಲಾಖೆಗಳಿಗೆ ಸಂಬಂಧಿಸಿದಂತೆ ನೂರಾರು ಅರ್ಜಿಗಳು ಸಲ್ಲಿಕೆಯಾದವು. ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು. ಸ್ಥಳ ಪರಿಶೀಲನೆ ಹಾಗೂ ಹೆಚ್ಚಿನ ದಾಖಲೆಗಳ ಅಗತ್ಯವಿರುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಜಾಸೇವಾ ಅಭಿಯಾನವು ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಹೆಜ್ಜೆಯಾಗಿದೆ. ಸಾರ್ವಜನಿಕರು ಕೇವಲ ಅಹವಾಲು ಸಲ್ಲಿಸುವುದಷ್ಟೇ ಅಲ್ಲದೆ, ಪರಿಹಾರ ದೊರೆಯುವ ಪ್ರಕ್ರಿಯೆಯಲ್ಲಿ ಅಗತ್ಯ ದಾಖಲೆ ಮತ್ತು ಮಾಹಿತಿಗಳನ್ನು ನೀಡಿ ಜಿಲ್ಲಾಡಳಿತದೊಂದಿಗೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹಾಗೂ ಸಹಾಯಕ ಆಯುಕ್ತ ಗಂಗಪ್ಪ ಎಂ. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಜಾಸೇವೆ ಆಂದೋಲನ: ಅರ್ಜಿ ಸಲ್ಲಿಸಲು ಶಿರಹಟ್ಟಿಯಲ್ಲಿ ನೂಕುನುಗ್ಗಲು
ಮಕ್ಕಳ, ದೇಶದ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ: ಡಾ. ಚಂದ್ರು ಲಮಾಣಿ