ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿ ಆಗಿರುವ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವರೆಗೆ ಸದನದ ಒಳಗೂ ಮತ್ತು ಹೊರಗೂ ಹೋರಾಟ ನಡೆಸಲಾಗುವುದು ಎಂದು ಹಡಗಲಿ ಶಾಸಕ ಕೃಷ್ಣ ನಾಯ್ಕ ತಿಳಿಸಿದರು.
ಹೊಸಪೇಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿ ಆಗಿರುವ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವರೆಗೆ ಸದನದ ಒಳಗೂ ಮತ್ತು ಹೊರಗೂ ಹೋರಾಟ ನಡೆಸಲಾಗುವುದು ಎಂದು ಹಡಗಲಿ ಶಾಸಕ ಕೃಷ್ಣ ನಾಯ್ಕ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ₹187 ಕೋಟಿ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಭಾಗಿಯಾಗಿದ್ದಾರೆ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅದನ್ನು ಒಪ್ಪಿಕೊಂಡು ಅವರ ರಾಜೀನಾಮೆ ಪಡೆದಿದ್ದರು. ಆದರೆ, ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸುವ ಅನಿವಾರ್ಯತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಏನಿತ್ತು. ಮುಖ್ಯಮಂತ್ರಿಗಳಿಗೆ ಏನಾದರೂ ಭಯವಿತ್ತೇ? ಇಲ್ಲವೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒತ್ತಡ ಏನಾದರೂ ಇತ್ತೇ. ನಾಗೇಂದ್ರ ಅವರ ವಿರುದ್ಧ ಇ.ಡಿ. ಚಾರ್ಚ್‌ಶೀಟ್ ಕೂಡ ಸಲ್ಲಿಸಿದೆ. ಇಷ್ಟೇಲ್ಲ ಇದ್ದರೂ ನಾಗೇಂದ್ರ ಅವರನ್ನು ಸಚಿವರನ್ನಾಗಿ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ನಾಗೇಂದ್ರ ಅವರ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೆ ನೈತಿಕತೆ ಇದ್ದರೆ ತಕ್ಷಣವೇ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು. ಕೆಲಸ ಹರಸಿ ಗುಳೆ ಹೋಗುತ್ತಿರುವುದನ್ನು ತಡೆಯಬೇಕು. ವಿಬಿ ಜೀ ರಾಮ್ ಜಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಬಿಜೆಪಿ ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಅಶೋಕ ಜೀರೆ, ಸಂದೀಪ್ ಸಿಂಗ್, ಬಲ್ಲಾಹುಣಿಸಿ ರಾಮಣ್ಣ, ಎಸ್. ಕೃಷ್ಣನಾಯ್ಕ, ಕೆ.ಎಸ್. ರಾಘವೇಂದ್ರ, ಮಧುಸೂದನ್, ಜಗದೀಶ್ ಕಮಟಗಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.