
ನರಗುಂದ: ರಾಜ್ಯದಲ್ಲಿ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಸರ್ಕಾರ ಸರಿಪಡಿಸುವ ವರೆಗೆ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದು ರೈತಸೇನಾ ಸಂಘಟನೆಯ ರಾಜ್ಯ ಅಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದರು.
ಬೆಳೆಗಳಿಗೆ ಯೋಗ್ಯ ಬೆಲೆ ಸಿಗದೆ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಮನಗಂಡು 2021ರಲ್ಲಿ ನಾನು, ಎಲ್ಲ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಸರ್ಕಾರ ಖರೀದಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೋರ್ಟ್‌ಗೆ ಸಲ್ಲಿಸಲಾಗಿತ್ತು. 2025ರ ಫೆಬ್ರವರಿಯಲ್ಲಿ ಕೋರ್ಟ್ ರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಸರ್ಕಾರ ಖರೀದಿ ಮಾಡಬೇಕೆಂದು ಆದೇಶ ಹೊರಡಿಸಿತು. ರಾಜ್ಯದ ಪ್ರತಿ ತಾಲೂಕಿನಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕೆಂದು ಹೇಳಿದೆ. ಆದರೂ ಸರ್ಕಾರ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸದೇ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಸರ್ಕಾರ ಬೆಂಬಲ ಬೆಲೆಯಲ್ಲಿ ಪ್ರತಿ ತಾಲೂಕಿನಲ್ಲಿ 10 ಖರೀದಿ ಕೇಂದ್ರ ಪ್ರಾರಂಭಿಸಿ ಖರೀದಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.ತಹಸೀಲ್ದಾರ್ ಶ್ರೀಶೈಲ ತಳವಾರ ರೈತರ ಮನವಿ ಸ್ವೀಕರಿಸಿ ಸರ್ಕಾರಕ್ಕೆ ರವಾನೆ ಮಾಡಲಾಗುವುದೆಂದು ಹೇಳಿದರು. ಈ ಸಂದರ್ಭದಲ್ಲಿ ಶಿವಪ್ಪ ಹೊರಕೇರಿ, ಗುರು ರಾಮನಗೌಡ್ರ, ಮಹೇಶ ಕಿರೇಸೂರ, ಮಾಯಪ್ಟ ಒಡಕನವರ, ಗಿರಿಯಪ್ಪ ಹೊಟ್ಟಿ, ಗುರು ಚಿಂಚನಸೂರ, ಶಿವಪ್ಪ ಸಾತಣ್ಣವರ, ತಿಪ್ಪಣ್ಣ ಮೇಟಿ, ಮುತ್ತು ಪಾಟೀಲ, ಹನುಮಂತ ಸರನಾಯ್ಕರ, ವೀರಭಸಪ್ಟ ಹೂಗಾರ, ಎಸ್.ಬೀ. ಜೋಗಣ್ಣವರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಶರಣಗೌಡ ಪಾಟೀಲ ಮುಂತಾದವರು ಇದ್ದರು.