ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಸಹಕರಿಸಿ: ನ್ಯಾ ಭಾರತಿ

KannadaprabhaNewsNetwork | Published : Jun 13, 2024 12:49 AM

ಸಾರಾಂಶ

ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಾಮಾಜಿಕ ಪಿಡುಗು ಆಗಿರುವ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಸರ್ವರೂ ಸಹಕರಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್ ಭಾರತಿ ತಿಳಿಸಿದರು.ನಗರದ ವರನಟ ಡಾ. ರಾಜಕುಮಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

14 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ದುಡಿಮೆಗೆ ನೇಮಿಸಿಕೊಳ್ಳುವಂತಿಲ್ಲ. ಶಾಲಾ ಮಕ್ಕಳು ಶಾಲೆ ಬಿಟ್ಟು ದುಡಿಮೆಗೆ ಹೋಗುತ್ತಿದ್ದರೆ ಮಾಹಿತಿ ನೀಡಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಒದಗಿಸಲಾಗಿದೆ. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರು ಕೂಡ ಸಹಕರಿಸಬೇಕು ಎಂದು ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಮಾತನಾಡಿ, ಪ್ರತಿ ವರ್ಷ ಜೂ. 12 ಅನ್ನು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಉದ್ದೇಶ ಮಕ್ಕಳನ್ನು ದುಡಿಮೆಗೆ ತೊಡಗಿಸಿಕೊಳ್ಳುವುದರಿಂದ ಅವರ ಭವಿಷ್ಯ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬುದನ್ನ ಮನವರಿಕೆ ಮಾಡುವುದಾಗಿದೆ ಎಂದರು. ಮಕ್ಕಳಿಗೆ ವಿದ್ಯೆ ತುಂಬಾ ಮುಖ್ಯವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಮಕ್ಕಳು ದುಡಿಯುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು. ಶಿಕ್ಷಣಕ್ಕೆ ಮಹತ್ವ ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ತಡೆಯಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಯಾದರೆ ಇತರೆ ಅಭಿವೃದ್ಧಿಯೂ ಸಾಧ್ಯವಾಗಲಿದೆ ಎಂದು ನ್ಯಾಯಾಧೀಶರಾದ ಈಶ್ವರ್ ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಶಾಲೆ ಬಿಟ್ಟ ಮಕ್ಕಳ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೂ ಸೇರಿ ಭವಿಷ್ಯದ ಹಿತ ದೃಷ್ಠಿಯಿಂದ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು. ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲಿ ದುಡಿಮೆಗೆ ದೂಡದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಎಂ. ಸವಿತಾ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು ಎಂದರು. ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಟಿ. ಜೆ. ಸುರೇಶ್ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಬಗ್ಗೆ ಅವರು ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್, ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ್‌ಪ್ರಸನ್ನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಪದ್ಮಜ, ಹಿರಿಯ ಭೂ ವಿಜ್ಞಾನಿ ಧನಲಕ್ಷ್ಮಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಂಜುಳ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕರಾದ ಎಂ. ಮಹೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share this article