26 ರಿಂದ ಫೆ.23ರ ವರೆಗೆ ನಡೆಯಲಿರುವ ಮೆರವಣಿಗೆ ಕನ್ನಡಪ್ರಭ ವಾರ್ತೆ ಹಾಸನ
ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯು ಜಿಲ್ಲೆಯಲ್ಲಿ ಜ.೨೬ ರಿಂದ ಫೆ.೨೩ ರವರೆಗೆ ನಡೆಯಲಿದೆ. ಇದರ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಜ.೨೬ ರಂದು ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ೨೬೪ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ನಗರ ಪ್ರದೇಶದಲ್ಲಿಯೂ ಜಾಥಾ ಸಂಚರಿಲು ರೂಟ್ ಮ್ಯಾಪ್ ತಯಾರಿಸಲಾಗಿದೆ. ಸ್ತಬ್ಧಚಿತ್ರ ಹಾಗೂ ಎಲ್‌ಇಡಿ ಒಳಗೊಂಡ ಎರಡು ಪ್ರತ್ಯೇಕ ವಾಹನಗಳು ಪ್ರತಿದಿನ ೫ ಗ್ರಾಮ ಪಂಚಾಯಿತಿಗಳಲ್ಲಿ ಸಂಚಾರಿಸಿ ಎಲ್ಲರ ಸಹಭಾಗಿತ್ವದಲ್ಲಿ ಸಂವಿಧಾನದ ಆಶಯಗಳನ್ನು ಕುರಿತು ಜಾಗೃತಿ ಮೂಡಿಸಲಿದ್ದು, ಉಪನ್ಯಾಸ ನೀಡಲು ೨೩ ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.ಜ.೨೬ ರಿಂದ ಫೆ.೨೩ ರ ವರೆಗೆ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಸಂದರ್ಭದಲ್ಲಿ ಸ್ಥಳೀಯ ಎಲ್ಲಾ ಸಂಘಟನೆಗಳು ಪಾಲ್ಗೊಂಡು ಸಡಗರದಿಂದ ಹಬ್ಬದ ರೀತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸ್ತಬ್ಧ ಚಿತ್ರಗಳ ನಿರ್ಮಾಣಕ್ಕೆ ಈಗಾಗಲೇ ಕ್ರಮವಹಿಸಲಾಗಿದ್ದು, ಸಂವಿಧಾನ ಜಾಗೃತಿ ಜಾಥಾವನ್ನು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಸಿ ಯಶಸ್ವಿಗೊಳಿಸಲು ಸಿದ್ಧತೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಮಾತನಾಡಿ, ಕಾರ್ಯಕ್ರಮದ ಉದ್ದೇಶ ಸಫಲವಾಗುವಂತೆ ಮಾಡಲು ಎಲ್ಲರ ಸಹಭಾಗಿತ್ವ ಬಹುಮುಖ್ಯವಾಗಿದ್ದು, ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಥಳೀಯ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಿ ಎಲ್ಲರನ್ನೂ ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲು ತಿಳಿಸಲಾಗಿದೆ ಎಂದರು.
ಜಾಥಾ ಸಂದರ್ಭದಲ್ಲಿ ಕರಪತ್ರ ಹಾಗೂ ಸಂವಿಧಾನ ಪೀಠಿಕೆಯ ಪ್ರತಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಲಕ್ಷ್ಮೇಗೌಡ, ಈರಯ್ಯ, ಸಂದೇಶ, ಹರೀಶ್, ಸಿದ್ದಣ, ಹೆತ್ತೂರು ನಾಗರಾಜ್, ಸುರೇಶ್ ಗುರೂಜಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತು ಜಿಲ್ಲಾಧಿಕಾರಿ ಸತ್ಯಭಾಮ ನೇತೃತ್ವದಲ್ಲಿ ಸಭೆ ನಡೆಯಿತು.