
ತುಮಕೂರು: ಇ-ಪೌತಿ ಖಾತಾ ಆಂದೋಲನ–2 ರಾಜ್ಯಾದ್ಯಂತ ಆರಂಭಗೊಂಡಿದ್ದು, ಗ್ರಾಮೀಣ ಪ್ರದೇಶಗಳ ಜನರಿಗೆ ಭೂ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶ ಹೊಂದಿದೆ. ಗ್ರಾಮಸ್ಥರು ಸಂಬಂಧಿಸಿದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಇ-ಪೌತಿ ಖಾತಾ ಆಂದೋಲನ–2 ಪ್ರಾರಂಭಿಸಲಾಗಿದ್ದು, ಇದರ ಭಾಗವಾಗಿ ಗ್ರಾಮಗಳಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸ್ಥಳೀಯ ಕಂದಾಯ ಮತ್ತು ಮೋಜಿಣಿ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರನ್ನು ಭೇಟಿ ಮಾಡಿ, ಇ-ಪೌತಿ ಅರ್ಜಿಗಳ ಸ್ವೀಕೃತಿ, ದಾಖಲೆಗಳ ಪರಿಶೀಲನೆ, ಅರ್ಜಿಗಳ ವಿಲೇವಾರಿ ಹಾಗೂ ಖಾತಾ ಬದಲಾವಣೆ ಪ್ರಕ್ರಿಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಸಾರ್ವಜನಿಕರಿಗೆ ಕಾರ್ಯಕ್ರಮದ ಉದ್ದೇಶ ಹಾಗೂ ಇದರ ಪ್ರಯೋಜನಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಮ್ ಜಮ್, ತಹಸೀಲ್ದಾರ್ ರಾಜೇಶ್ವರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.