ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಿಸಿ

KannadaprabhaNewsNetwork |  
Published : Feb 01, 2024, 02:01 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ  | Kannada Prabha

ಸಾರಾಂಶ

ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು.

ಚಿತ್ರದುರ್ಗ: ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ ಮಕ್ಕಳು ಈ ಉತ್ಪನ್ನಗಳನ್ನು ಬಳಸದಂತೆ ಹೆಚ್ಚು ಜಾಗೃತಿವಹಿಸಬೇಕು. ನಿಯಮಗಳನ್ನು ಮೀರಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಬೇಕು. ಮಕ್ಕಳು ಯುವ ಜನರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಶಾಲಾ ಕಾಲೇಜುಗಳಲ್ಲಿ 100 ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಒಟ್ಟು 60 ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ಎಂದು ಘೋಷಿಸಲಾಗಿದೆ. 111 ದಾಳಿಗಳನ್ನು ನಡೆಸಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸಮನ್ವಯ ಸಮತಿ ಸಭೆಗಳನ್ನು ನಡೆಸಲಾಗಿದೆ. ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಇದುವರೆಗೂ 4515 ಜನರು ಸಮಾಲೋಚನೆ ಹಾಗೂ ವಿವಿಧ ಸೇವೆಗಳನ್ನು ಪಡೆದಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯ ದಾಸರಾಗಿದ್ದ 334 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಒಟ್ಟು 13 ಜನರು ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸುತ್ತಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ಚಂದ್ರಶೇಖರ್ ವಿ ಕಂಬಾಳಿಮಠ ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿ.ಟಿ.ರೇಣುಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೆಶಕ ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಬಣಕಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ನಾಗರಾಜ, ಪೌರಾಯುಕ್ತೆ ರೇಣುಕಾ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಭುದೇವ್.ವಿ.ಎಂ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ