ಕನ್ನಡಪ್ರಭ ವಾರ್ತೆ ಮಂಗಳೂರುಯಕ್ಷಗಾನದಲ್ಲಿ ಗಾನ, ನಾಟ್ಯ ವೈಭವವು ಪ್ರಧಾನವಾಗದೇ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಮೇಳದ ಕಲಾವಿದರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಸಮಾವೇಶ ನಡೆಸಿ, ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ವಿಚಾರ ವಿಮರ್ಶೆ ನಡೆಸಬೇಕು ಎಂದು ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ ಹೇಳಿದ್ದಾರೆ.ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಆಯೋಜಿಸಲಾದ ಏಳನೇ ವರ್ಷದ ಭ್ರಾಮರಿ ಯಕ್ಷ ವೈಭವ 2024’, ಯಕ್ಷ ಛಾಯಾಚಿತ್ರ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮಂಗಳೂರು ನಗರದ ಹೃದಯಭಾಗದಲ್ಲಿ ಪ್ರತಿವರ್ಷ ರಾತ್ರಿಪೂರ್ತಿ ಯಕ್ಷಗಾನ ಪ್ರದರ್ಶನ ಏರ್ಪಡಿಸುತ್ತಿರುವ ಭ್ರಾಮರಿ ಯಕ್ಷಮಿತ್ರರು ಸಂಘಟನೆಯ ಕಾರ್ಯ ಶ್ಲಾಘನೀಯ. ಯಕ್ಷಗಾನದ ಸಂದೇಶ ಇಂದಿನ ಜನತೆಗೆ ಅಗತ್ಯವಾಗಿದೆ ಎಂದರು.ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್, ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು.
ತೆಂಕುತಿಟ್ಟಿನ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರಿಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ, ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘ ಕೈರಂಗಳ ಮತ್ತು ಮನೋಹರ ಎಸ್. ಕುಂದರ್ ಎರ್ಮಾಳ್ ಬಡಾ ಅವರಿಗೆ ‘ಭ್ರಾಮರಿ ಯಕ್ಷಸೇವಾ’ ಪುರಸ್ಕಾರ ಪ್ರದಾನ ಮಾಡಲಾಯಿತು. ಮನೋಹರ ಕುಂದರ್ ಅವರ ಅಪೂರ್ವ ಯಕ್ಷ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು.ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್‌ನ ಸತೀಶ್ ಮಂಜೇಶ್ವರ ಸ್ವಾಗತಿಸಿದರು. ವಿನಯಕೃಷ್ಣ ಕುರ್ನಾಡು ವಂದಿಸಿದರು. ಗುರುರಾಜ ಹೊಳ್ಳ ಬಾಯಾರು ನಿರೂಪಿಸಿದರು. ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಂಚವಟಿ, ಕಂಸ ವಿವಾಹ, ಸುಧನ್ವ ಮೋಕ್ಷ ಮತ್ತು ಮಹಿರಾವಣ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.