ಇದು ಜಾತಿ ಸಮೀಕ್ಷೆಯಲ್ಲ ಎಂದು ಸ್ಪಷ್ಟಪಡಿಸಿ
ಕನ್ನಡಪ್ರಭ ವಾರ್ತೆ ಬಳ್ಳಾರಿ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಡೆಸುವ ಸಮೀಕ್ಷಾ ಕಾರ್ಯ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಸೂಚಿಸಿದರು.ಜಿಲ್ಲಾಡಳಿತ, ಜಿಪಂ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ನಗರದ ಜಿಪಂ ನಜೀರ್ ಸಾಬ್ ಸಭಾಂಗಣದಲ್ಲಿ ಮಾಸ್ಟರ್ ಟ್ರೇನರ್‌ಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಸಮೀಕ್ಷೆ ಅಗತ್ಯವಾಗಿದೆ ಎಂದು ಹೇಳಿದ್ದು, ಇದೇ ಸೆ. 22ರಿಂದ ಆರಂಭವಾಗಿ ಅ. 7ರೊಳಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ. ಹಾಗಾಗಿ ರಾಜ್ಯ ಹೊರಡಿಸುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಸಹ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಬೇಕು ಎಂದು ಹೇಳಿದರು.
ತರಬೇತಿ ಪಡೆದ ಮಾಸ್ಟರ್ ಟ್ರೇನರ್‌ಗಳು ತಮ್ಮ ಕೆಳಹಂತದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸರಿಯಾಗಿ ಮಾರ್ಗದರ್ಶನ ಮಾಡಬೇಕು. ವಾಟ್ಸ್‌ಆ್ಯಪ್ ಗುಂಪು ರಚಿಸಬೇಕು. ತಾಂತ್ರಿಕ ದೋಷ ಹಾಗೂ ಇತರ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಕೇಳಿ ತಿಳಿದುಕೊಳ್ಳಬೇಕು. ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟದಲ್ಲಿ ತರಬೇತಿ ಪಡೆದುಕೊಂಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಶಿವಲಿಂಗಾರೆಡ್ಡಿ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ವಿಜಯರಂಗಾರೆಡ್ಡಿ, ಗಂಗಾಧರ ಕೆ., ರೇವಣ್ಣ ಸಿದ್ದಪ್ಪ ಅವರು ಸಮೀಕ್ಷಾ ಕಾರ್ಯದ ಕುರಿತು ತರಬೇತಿ ನೀಡಿದರು.