ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ

KannadaprabhaNewsNetwork |  
Published : Feb 15, 2024, 01:33 AM IST
ಸಭೆಯಲ್ಲಿ ರಾಜ್ಯಸಭಾ ಸದಸ್ಯ, ಧಾರವಾಡ ಲೋಕಸಭಾ ಕ್ಷೇತ್ರದ ಪ್ರಭಾರಿ ಈರಣ್ಣ ಕಡಾಡಿ ಮಾತನಾಡಿದರು. | Kannada Prabha

ಸಾರಾಂಶ

ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.

ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗುವಲ್ಲಿ ಶ್ರಮಿಸುವಂತೆ ರಾಜ್ಯಸಭಾ ಸದಸ್ಯ, ಧಾರವಾಡ ಲೋಕಸಭಾ ಕ್ಷೇತ್ರದ ಪ್ರಭಾರಿ ಈರಣ್ಣ ಕಡಾಡಿ ಹೇಳಿದರು.

ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಧಾರವಾಡ ಲೋಕಸಭಾ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದ ವೇಳೆ ದೇಶದ ಆರ್ಥಿಕ ಸ್ಥಿತಿ 11ನೇ ಸ್ಥಾನದಲ್ಲಿತ್ತು. ಮೋದಿ ಪ್ರಧಾನಿಯಾದ ಮೇಲೆ 5ನೇ ಸ್ಥಾನಕ್ಕೇರಿದೆ. ಕೆಲವೇ ವರ್ಷಗಳಲ್ಲಿ ದೇಶದ ಆರ್ಥಿಕತೆ 3ನೇ ಸ್ಥಾನಕ್ಕೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಎಂದು ಹೇಳಿದವರು 10 ಕೆ.ಜಿ. ಅಕ್ಕಿ ನೀಡುತ್ತೇವೆ ಎಂದಿದ್ದರು. ಈಗ 5 ಕೆ.ಜಿ. ನೀಡುವ ಶಕ್ತಿಯೂ ಕಾಂಗ್ರೆಸ್ಸಿಗಿಲ್ಲ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಅನೇಕ ವಿರೋಧಿಗಳು ಹೋರಾಟ ಮಾಡುವ ಮೂಲಕ ಮುಗ್ದ ರೈತರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬೆಂಬಲ ಬೆಲೆ ತರುವುದಾಗಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಏಕೆ ಸ್ವಾಮಿನಾಥನ್‌ ವರದಿ ಜಾರಿಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ರಸ್ತೆಗಳು, ಆಸ್ಪತ್ರೆಗಳು ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ₹11 ಲಕ್ಷ ಕೋಟಿ ಖರ್ಚು ಮಾಡಲಾಗಿದೆ. ಭಾರತವು ಜಗತ್ತಿನ ಐದನೇ ಪ್ರಬಲ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ. ಜಗತ್ತಿನ 4ನೇ ಸೈನಿಕ ಬಲ ಹೊಂದಿದ ರಾಷ್ಟ್ರ ಭಾರತ. ನರೇಂದ್ರ ಮೋದಿ ಮೂರನೇ ಅವಧಿಗೆ ದೇಶದ ಪ್ರಧಾನಮಂತ್ರಿಗಳಾಗಬೇಕು. ಕಾರ್ಯಕರ್ತರು ಪ್ರತಿ ಬೂತ್‌ಗೆ ತೆರಳಿ ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಲೋಕಸಭಾ ಕ್ಷೇತ್ರದ ಸಂಚಾಲಕ ಸಿ.ಎಂ. ನಾಗರಾಜ ಮಾತನಾಡಿದರು. ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ ಸೇರಿದಂತೆ ಹಲವರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ