ಅಕ್ಕಪಡೆಯ ಸಾಕಾರಕ್ಕೆ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

KannadaprabhaNewsNetwork |  
Published : Jan 22, 2026, 02:30 AM IST
ಬಳ್ಳಾರಿಯ ಎಸ್ಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಅಕ್ಕ ಪಡೆ’ ಯೋಜನೆಯನ್ನು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಹಿಳೆ ಮತ್ತು ಮಕ್ಕಳಿಗಿರುವ ಹಕ್ಕುಗಳು, ಕಾನೂನುಗಳ ಅರಿವು ಮೂಡಿಸುವುದು ಯೋಜನೆಯ ಪ್ರಮುಖ ಆಶಯವಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಬಳ್ಳಾರಿ: ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕಪಡೆ’ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಮಹಿಳೆ ಮತ್ತು ಮಕ್ಕಳಿಗಿರುವ ಹಕ್ಕುಗಳು, ಕಾನೂನುಗಳ ಅರಿವು ಮೂಡಿಸುವುದು ಯೋಜನೆಯ ಪ್ರಮುಖ ಆಶಯವಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಅಕ್ಕ ಪಡೆ’ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಬುನಾದಿ ಆರಂಭವಾಗುವುದು ಮನೆಯಿಂದ. ಮನೆಯಲ್ಲಿಯೇ ಪೋಕ್ಸೋ, ಬಾಲ್ಯವಿವಾಹ ಸೇರಿದಂತೆ ಅನಿಷ್ಟ ಪದ್ಧತಿಗಳ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಅಕ್ಕಪಡೆ ಯೋಜನೆಯು ಸಾಕಾರಗೊಳ್ಳಬೇಕು ಎಂದು ಆಶಿಸಿದ ಅವರು, ಇದಕ್ಕೆ ಬೇಕಾದ ಪೂರಕ ಸಹಕಾರ ಜಿಲ್ಲಾಡಳಿತ ನೀಡಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾತನಾಡಿ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ಸಹಾಯ, ಕಾನೂನು ಜಾಗೃತಿ ಮತ್ತು ಸಲಹೆ ನೀಡುವುದು ಅಕ್ಕಪಡೆ ಯೋಜನೆಯ ಕಾರ್ಯವಾಗಿದೆ. ಇದರ ಮೇಲ್ವಿಚಾರಣೆಗಾಗಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ವರದಿಯ ಪರಿಶೀಲನೆ ನಡೆಸಲಾಗುವುದು. ಇದರಿಂದ ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ಮಹಿಳೆಯರ ಸುರಕ್ಷತೆ - ಸಮಾಜದ ಜವಾಬ್ದಾರಿ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಕೌಟುಂಬಿಕ ಹಿಂಸೆ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಮಹಿಳಾ ಕಳ್ಳಸಾಗಣೆ ಸೇರಿದಂತೆ ಸಾಮಾಜಿಕ ಕೆಡುಕುಗಳನ್ನು ತಡೆಯಲು ಅಕ್ಕಪಡೆ ಒಂದು ಸಮುದಾಯ ಆಧಾರಿತ ರಕ್ಷಣಾ ಪಡೆಯಾಗಿದೆ ಎಂದರು.

ಜಿಪಂ ಸಿಇಒ ಮಹಮ್ಮದ್ ಹಾರಿಸ್ ಸುಮೇರ್, ಅಪರಾಧ ನಡೆಯುವುದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಬಹಳ ಮುಖ್ಯ. ಹಾಗಾಗಿ, ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಪೋಕ್ಸೋ, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಪ್ರಾಸ್ತಾವಿಕ ಮಾತನಾಡಿದರು.

ಮಕ್ಕಳ ವಿಶೇಷ ಘಟಕದ ನೋಡೆಲ್ ಅಧಿಕಾರಿಯೂ ಆದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿ ಕುಮಾರ್ ಅವರು ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ‘ಅಕ್ಕಪಡೆ’ ಯೋಜನೆಯ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಾಗೂ ‘ಅಕ್ಕಪಡೆ’ ಗಸ್ತು ವಾಹನಕ್ಕೆ ಚಾಲನೆ ನೀಡಿದರು.

ಹೆಚ್ಚವರಿ ಎಸ್ಪಿ ನವೀನ್ ಕುಮಾರ್ ಎನ್., ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶೇಖ್ ಸಾಬ್, ಪದವಿ ಪೂರ್ವ ಶಿಕ್ಷಣಾ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ಹಳ್ಳದಮನೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಕೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ, ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ರಮೇಶ್ ಕುಲಕರ್ಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌
ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ