ಹನುಮಸಾಗರ: ಕಬ್ಬರಗಿ ಗ್ರಾಮದ ಐತಿಹಾಸಿಕ ಕಪಿಲತೀರ್ಥ ಜಲಪಾತವನ್ನು ರಾಜ್ಯದ ಪ್ರಮುಖ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು ಸ್ಥಳೀಯರು ಸಂಪೂರ್ಣ ಸಹಕಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಕಪಿಲತೀರ್ಥ ಜಲಪಾತವು ಕಲ್ಯಾಣ ಕರ್ನಾಟಕ ಭಾಗದ ಅಪರೂಪದ ಪ್ರಕೃತಿ ಸಂಪತ್ತಾಗಿದ್ದು, ಇದನ್ನು ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅರಣ್ಯ ಇಲಾಖೆಯ ಅನುಮತಿ ಪಡೆಯುವ ಪ್ರಕ್ರಿಯೆಯಿಂದ ಕಾಮಗಾರಿಗೆ ಸ್ವಲ್ಪ ವಿಳಂಬವಾಗಿದ್ದರೂ ಈಗ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆತಿದೆ. ಪ್ರವಾಸಿಗರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸುವ ಜತೆಗೆ ಪ್ರಕೃತಿಯ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ನಡೆಸಲಾಗುವುದು. ಸಿಮೆಂಟ್ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡಿ ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಮಾತನಾಡಿ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು ₹1 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.ಇದಕ್ಕಾಗಿ ಎದುರಾಗಿದ್ದ ಎಲ್ಲ ಅಡೆತಡೆ ನಿವಾರಿಸಲಾಗಿದೆ. ಜಲಪಾತದ ಮೆಟ್ಟಿಲು ದುರಸ್ತಿ, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳ ನಿರ್ಮಾಣ, ಬಟ್ಟೆ ಬದಲಾಯಿಸುವ ಕೊಠಡಿ, ಪ್ರವಾಸಿಗರಿಗೆ ಅಗತ್ಯವಾದ ಮೂಲಸೌಕರ್ಯಗಳ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿ ಕೈಗೊಳ್ಳಲಾಗಲಿವೆ. ಅಭಿವೃದ್ಧಿ ಕಾಮಗಾರಿಗಳ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಜಲಪಾತಕ್ಕೆ ಆಗಮಿಸುವವರು ಪ್ಲಾಸ್ಟಿಕ್ ತ್ಯಾಜ್ಯ ತರುವುದನ್ನು ಸಂಪೂರ್ಣವಾಗಿ ತಪ್ಪಿಸಿ ಪರಿಸರ ಹಾಗೂ ಸ್ವಚ್ಛತೆ ಕಾಪಾಡಬೇಕು ಎಂದರು.ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ ಕೆ.ಎನ್. ಮಾತನಾಡಿ, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು. ಕಪಿಲತೀರ್ಥದ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಎಲ್ಲ ಕಾಮಗಾರಿ ರೂಪಿಸಲಾಗಿದೆ. ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಂಡು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿದರೆ ಕಪಿಲತೀರ್ಥ ಮಾದರಿ ಪರಿಸರ ಸ್ನೇಹಿ ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದೆ ಎಂದರು.