ಹೊಸಪೇಟೆ: ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ತಡೆಗಟ್ಟುವ ಮೂಲಕ ಆರೋಗ್ಯಕರ ಹಾಗೂ ಸದೃಢ ಸಮಾಜ ನಿರ್ಮಿಸುವ ಉದ್ದೇಶದಿಂದ ಭಾರತ ಸರ್ಕಾರವು ನಶಾ ಮುಕ್ತ ಭಾರತ ಅಭಿಯಾನ ಜಾರಿಗೊಳಿಸಿದೆ. ಯುವಜನತೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮಾದಕವಸ್ತು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಹಿರಿಯ ತಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಎನ್. ಸುಬ್ರಮಣ್ಯ ಹೇಳಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 2020ರ ಆ.15ರಂದು ಆರಂಭಿಸಿದ ಈ ಅಭಿಯಾನವು ಆರಂಭದಲ್ಲಿ 272 ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ಪ್ರಸ್ತುತ ದೇಶದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ವಲಯಗಳಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಕಠಿಣ ಕಾನೂನು ಕ್ರಮಗಳು: ಮಾದಕವಸ್ತುಗಳ ತಯಾರಿಕೆ, ಮಾರಾಟ, ಸಾಗಾಣಿಕೆ ಮತ್ತು ಅಕ್ರಮ ಬಳಕೆ ನಿಯಂತ್ರಿಸಲು ಮಾದಕದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985 ಜಾರಿಯಲ್ಲಿದೆ. ಕಾಯ್ದೆಯ ಉಲ್ಲಂಘನೆಗೆ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಮಾದಕವಸ್ತು ಅಕ್ರಮ ಸಾಗಾಣಿಕೆ ಮತ್ತು ವ್ಯಾಪಾರ ತಡೆಗೆ ಕಾರ್ಯಾಚರಣೆ ನಡೆಸುತ್ತಿವೆ. ವ್ಯಸನಕ್ಕೆ ಒಳಗಾದವರಿಗೆ ಚಿಕಿತ್ಸೆ, ಆಪ್ತಸಮಾಲೋಚನೆ ಮತ್ತು ಪುನರ್ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.ಆರೋಗ್ಯ ಮತ್ತು ಸಾಮಾಜಿಕ ಬದುಕಿನ ಮೇಲೆ ದುಷ್ಪರಿಣಾಮ: ಮಾದಕವಸ್ತು ಸೇವನೆಯಿಂದ ಮೆದುಳಿನ ಕಾರ್ಯಕ್ಷಮತೆ ಕುಂಠಿತವಾಗುವುದು, ಖಿನ್ನತೆ,ಆತಂಕ, ಹೃದಯ ಮತ್ತು ಯಕೃತ್ತಿನ ಸಮಸ್ಯೆ ಉಂಟಾಗಬಹುದು. ಕುಟುಂಬದಲ್ಲಿ ಆರ್ಥಿಕ ಸಂಕಷ್ಟ, ಮಾನಸಿಕ ಒತ್ತಡ ಹಾಗೂ ಕೌಟುಂಬಿಕ ಕಲಹಕ್ಕೂ ಕಾರಣವಾಗುತ್ತದೆ. ವಿಶೇಷವಾಗಿ ಯುವಜನತೆ ವ್ಯಸನಕ್ಕೆ ಬಲಿಯಾದರೆ ದೇಶದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದರು.
ಮಾದಕ ವಸ್ತು ವ್ಯಸನಕ್ಕೆ ಒಳಗಾದವರನ್ನು ತಿರಸ್ಕರಿಸದೆ ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಪುನರ್ವಸತಿ ದೊರಕಿಸಲು ಸಮಾಜ ಸಹಕರಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಯುವಜನ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಹೇಳಿದರು.
ವಿಜಯನಗರ ಜಿಲ್ಲೆಯ ಡಿಎಚ್ಓ ಡಾ. ಲಿಂಗರಾಜು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.