ಕೊಪ್ಪಳ: ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಕುಟುಂಬದ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಹೇಳಿದರು.
ದುಶ್ಚಟಗಳು ವ್ಯಕ್ತಿಯ ನೆಮ್ಮದಿಯನ್ನು ಕಸಿದುಕೊಳ್ಳುವುದಲ್ಲದೆ ಇಡೀ ಕುಟುಂಬದ ಬದುಕನ್ನೇ ಹಾಳು ಮಾಡುತ್ತವೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತವೆ. ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ ಸಕ್ಕರಿ, ವಸತಿ ನಿಲಯದ ವಾರ್ಡನ್ ರವಿ ಧೂಳಾಪುರ, ಮುಖ್ಯೋಪಾಧ್ಯಾಯ ಹುಲಗಪ್ಪ ಭಜಂತ್ರಿ, ಹಿರಿಯ ವಕೀಲ ಸಂಗಮೇಶ ವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.