ಕಂಪ್ಲಿ: ಪಟ್ಟಣದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ವಿವಿಧ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು.
ತಾಲೂಕಿನ ಕೆಲ ಭಾಗಗಳಲ್ಲಿ, ವಿಶೇಷವಾಗಿ ಶಿಕಾರಿ ಕಾಲನಿಗಳ ಸುತ್ತಮುತ್ತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಇದೆ. ಇಂತಹ ಅಕ್ರಮ ಚಟುವಟಿಕೆ ತಡೆಯಲು ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಒಟ್ಟಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು.
ಶಿಕಾರಿ ಕಾಲನಿಗಳ ಸಮೀಪದ ಸ್ಮಶಾನ, ಬಯಲು ಪ್ರದೇಶಗಳು ಹಾಗೂ ಕುರುಚಲು ಗಿಡಗಳು ಹೆಚ್ಚಾಗಿ ಇರುವ ಸ್ಥಳಗಳಲ್ಲಿ ಕಳ್ಳಭಟ್ಟಿ ತಯಾರಿಕೆಗೆ ಅವಕಾಶ ಸಿಗುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶಗಳನ್ನು ಸ್ವಚ್ಛಗೊಳಿಸಲು ಸಂಬಂಧಿತ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿರುವವರ ಅನಧಿಕೃತ ಮನೆಗಳು ಹಾಗೂ ಅಕ್ರಮ ಚಟುವಟಿಕೆಗಳ ವಿವರಗಳನ್ನು ಸಂಗ್ರಹಿಸಿ ಪಟ್ಟಿ ತಯಾರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳ್ಳಭಟ್ಟಿ ತಡೆಗೆ ಸಂಬಂಧಿಸಿದ ದಾಳಿ ಕಾರ್ಯಾಚರಣೆಗಳ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ದಾಳಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಎಡಿ ಶ್ರೀಶೈಲ ರೂಗಿ, ಅಬಕಾರಿ ಉಪನಿರೀಕ್ಷಕ ರಾಮಾಂಜನಯ್ಯ ಹಾಗೂ ಕೆ. ನಾಗಮುನಿಸ್ವಾಮಿ, ಎಎಸ್‌ಐ ಪಿ. ಬಸವರಾಜ, ಮುಖ್ಯಶಿಕ್ಷಕ ಎಸ್.ಎಂ. ಸದಾಶಿವ, ಹೊಸಪೇಟೆಯ ಉಪ ವಲಯ ಅರಣ್ಯಾಧಿಕಾರಿ ವೀರೇಶ ಎಚ್. ಮಾಶೆಟ್ಟಿ, ಅರಣ್ಯ ವೀಕ್ಷಕ ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.