ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ: ಶಿವರಾಜ ತಂಗಡಗಿ

KannadaprabhaNewsNetwork |  
Published : Aug 05, 2024, 12:35 AM IST
3ಕೆಪಿಎಲ್26 ಅತಿವೃಷ್ಠಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಭೆ. | Kannada Prabha

ಸಾರಾಂಶ

ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು.

ಅತಿವೃಷ್ಟಿ, ಪ್ರವಾಹದ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಬರುವ ವಾರದಲ್ಲಿ ಅತೀಯಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅತಿವೃಷ್ಟಿ ಹಾಗೂ ಪ್ರವಾಹದ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಜೂನ್ ಮಾಹೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿತ್ತು. ಜುಲೈ ಮಾಹೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬರುವ ವಾರದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಮಳೆಯಿಂದಾಗಿ ಚರಂಡಿ ತುಂಬಿ ಹರಿದು ಅವ್ಯವಸ್ಥೆ ಉಂಟಾಗದಂತೆ ನೋಡಿಕೊಳ್ಳಬೇಕು. ನೀರಿನ ಪೈಪ್‌ಲೈನ್‌ಗಳ ದುರಸ್ತಿಗೆ ಗಮನ ಹರಿಸಬೇಕು ಎಂದರು.

ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳು ತೊಂದರೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಂತಹ ಗ್ರಾಮಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಅವಶ್ಯಕ ಸಂದರ್ಭ ಬಂದಲ್ಲಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸುರಕ್ಷಿತ ಸ್ಥಳಗಳನ್ನು ಗುರುತಿಸಬೇಕು. ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಾಗ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಡಂಗುರಗಳ ಮೂಲಕ ಜಾಗೃತಿ ಮೂಡಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜವಾಬ್ದಾರಿ ನಿರ್ವಹಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಜುಲೈ ಮಾಹೆಯ ಮಳೆಯ ಕೊರತೆಯಿಂದ ಒಣ ಬೇಸಾಯ ಅಥವಾ ಮಳೆಯಾಧಾರಿತ ಕೃಷಿಕರು ತೊಂದರೆಗೆ ಒಳಗಾಗಲಿದ್ದಾರೆ. ಮುಂದಿನ ವಾರವೂ ಮಳೆಯಾಗದಿದ್ದರೆ ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳು ಹಾನಿಯಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಿ ಮಳೆಯಾಗದಿದ್ದಲ್ಲಿ ಬೆಳೆ ಹಾನಿ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬೆಳೆ ವಿಮೆ ಕುರಿತು ರೈತರಿಂದ ದೂರುಗಳು ಬಾರದ ಹಾಗೆ ಅರ್ಹ ರೈತರಿಗೆ ಬೆಳೆವಿಮೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಕೈಗೊಳ್ಳಬೇಕಾದ ಎಲ್ಲ ಕ್ರಮಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೊಂದರೆಗೆ ಒಳಗಾಗಬಹುದಾದ ನದಿ ಪಾತ್ರದ 25 ಗ್ರಾಮ ಪಂಚಾಯಿತಿಗಳನ್ನು ಗುರುತಿಸಲಾಗಿದೆ. ಪ್ರವಾಹ ತಲೆದೋರಿದಲ್ಲಿ ಪರಿಹಾರ ಕ್ರಮವಾಗಿ ಕಾಳಜಿ ಕೇಂದ್ರ ಗುರುತಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೂ ಟಾಸ್ಕ್‌ಫೋರ್ಸ್ ರಚಿಸಲಾಗಿದ್ದು, ನೋಡಲ್ ಅಧಿಕಾರಿಯನ್ನು ಸಹ ನಿಯೋಜನೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಮಾತನಾಡಿದರು. ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಸಂಸದ ಕೆ.ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.ಪೋಸ್ಟರ್‌ ಬಿಡುಗಡೆ:

ಮೆಕ್ಕೆಜೋಳದಲ್ಲಿ ಕಂಡುಬರುವ ಹಾಗೂ ಕಂಡುಬರಬಹುದಾದ ಜೈವಿಕ ಹುಳಗಳ ನಿರ್ವಹಣೆ ಕುರಿತು ಕೃಷಿ ಇಲಾಖೆ ಹೊರತಂದಿರುವ ಪೋಸ್ಟರ್‌ಗಳನ್ನು ಸಚಿವರಾದ ಶಿವರಾಜ ತಂಗಡಗಿ, ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಬಿಡುಗಡೆಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ