ಕಾರ್ಕಳ: ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಯ ಬಹುದಿನಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತಹ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ, ಹೆಬ್ರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕುಮ್ಕಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಸಾವಿರಾರು ಕುಟುಂಬಗಳಿಗೆ ಕಾನೂನು ರಕ್ಷಣೆ ಹಾಗೂ ಹಕ್ಕುಪತ್ರ ನೀಡಲು ಕುಮ್ಕಿ ಕಾನೂನು ಸಡಿಲಗೊಳಿಸಬೇಕು. ಅಕ್ರಮಸಕ್ರಮದ 50 ಮತ್ತು 53ನೇ ನಮೂನೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ನೀಡಬೇಕು. 94ಸಿ ಅಡಿ ಅರ್ಜಿ ಸಲ್ಲಿಸಿ ಮನೆ ನಿರ್ಮಿಸಿಕೊಂಡಿರುವ ಕುಟುಂಬಗಳಿಗೂ ಹಕ್ಕುಪತ್ರ ನೀಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದಾಗಿ ಹಕ್ಕುಪತ್ರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದ್ದು, ಅರಣ್ಯ–ಕಂದಾಯ ಇಲಾಖೆಗಳ ಜಂಟಿ ಸರ್ವೆ ನಡೆಸಿ ಕಂದಾಯ ಭೂಮಿಯನ್ನು ಪ್ರತ್ಯೇಕಿಸಿ ಸಮಸ್ಯೆ ಪರಿಹರಿಸಬೇಕು. ದಾಖಲೆಗಳ ಕೊರತೆಯಿಂದ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಸಂಪರ್ಕ ಕಲ್ಪಿಸುವ ನಿರ್ಧಾರ ಕೈಗೊಳ್ಳಬೇಕು ಎಂದರು.ಕಸ್ತೂರಿ ರಂಗನ್ ವಿಚಾರದಲ್ಲಿ ಜನರ ಆತಂಕ ನಿವಾರಿಸುವಂತೆ ವೈಜ್ಞಾನಿಕ ಸಮೀಕ್ಷೆ ನಡೆಸಿ ಜನವಸತಿಗೆ ತೊಂದರೆಯಾಗದ ನಿರ್ಧಾರ ಕೈಗೊಳ್ಳಬೇಕು. ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ರೈಲ್ವೆ ಸಂಪರ್ಕ ವಿಸ್ತರಣೆಗೂ ಆದ್ಯತೆ ನೀಡಬೇಕು ಎಂದು ಹೇಳಿದರು.ಘಾಟಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು: ಆಗುಂಬೆ ಘಾಟಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು. ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಯೋಜನೆ ಘಾಟಿಯನ್ನು ಒಳಗೊಂಡಂತೆ ಸಮಗ್ರವಾಗಿ ಅನುಷ್ಠಾನಗೊಂಡಾಗ ಮಾತ್ರ ಕರಾವಳಿ–ಮಲೆನಾಡು ಸಂಪರ್ಕ, ಪ್ರವಾಸೋದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತುರ್ತು ತೀರ್ಮಾನ ಕೈಗೊಳ್ಳಬೇಕು ಎಂದು ನೀರೆ ಕೃಷ್ಣ ಶೆಟ್ಟಿ ಮನವಿ ಮಾಡಿದ್ದಾರೆ.