ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿ: ಡೀಸಿ ಆದೇಶ

KannadaprabhaNewsNetwork | Published : May 29, 2024 12:46 AM

ಸಾರಾಂಶ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ ಚಾಮರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಕಾರ್ಯವು ನಗರದ ನಂಜನಗೂಡು ರಸ್ತೆಯಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜೂ. 4 ರಂದು ನಡೆಯಲಿದ್ದು, ಚುನಾವಣೆ ಫಲಿತಾಂಶದ ನಿರೀಕ್ಷೆಯಲ್ಲಿ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಮತ್ತು ಸಾರ್ವಜನಿಕರ ಶಾಂತಿ, ನೆಮ್ಮದಿ ಕದಡುವ ಕಾನೂನು ಸುವ್ಯಸ್ಥೆಗೆ ಭಂಗ ಬರುವ ಸಾಧ್ಯತೆಗಳಿರುವುದರಿಂದ ಚಾಮರಾಜನಗರ ಜಿಲ್ಲೆಯಾದ್ಯಂತ ಮೆರವಣಿಗೆ, ಸಭೆ, ಸಮಾರಂಭ, ಪಟಾಕಿ ಸಿಡಿಸುವುದು, ಗುಂಪುಗೂಡುವುದು ಇತ್ಯಾದಿಗಳನ್ನು ನಿಷೇಧಿಸಿ ಜೂ. 3ರ ಬೆಳಗ್ಗೆ 6 ಗಂಟೆಯಿಂದ ಜೂ. 4ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಕೆಲ ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ಕೇಂದ್ರದ ಸುತ್ತಾ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಕಲ್ಲುಗಳು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡಬಾರದು.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಮತ ಎಣಿಕೆ ಕೇಂದ್ರದ ಸುತ್ತಾ 200ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿಗಳು ಹೊರತುಪಡಿಸಿದೆ)

ಮತ ಎಣಿಕೆ ಕೇಂದ್ರಗಳ ಸುತ್ತಾ 200 ಮೀಟರ್ ಪರಿಮಿತಿಯಲ್ಲಿ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವು ಮತ ಎಣಿಕೆ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳು, ಚುನಾವಣಾ ಏಜೆಂಟರುಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾ ನಾಗ್ ಆದೇಶದಲ್ಲಿ ತಿಳಿಸಿದ್ದಾರೆ.

Share this article