ಗಾಂಧೀಜಿ, ಶಾಸ್ತ್ರಿ ಆಶಯದಂತೆ ದೇಶ ಪ್ರಗತಿ: ಯಶ್‌ಪಾಲ್‌ ಸುವರ್ಣ

KannadaprabhaNewsNetwork |  
Published : Oct 04, 2025, 12:00 AM IST
02ಗಾಂಧಿ | Kannada Prabha

ಸಾರಾಂಶ

ಗುರುವಾರ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿ ಕಟ್ಟೆಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮ ನೆರವೇರಿತು.

ಉಡುಪಿ: ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಮಾದರಿ ಎನಿಸಿರುವ ಉಡುಪಿ ಜಿಲ್ಲೆಗೂ ಗಾಂಧೀಜಿಗೂ ಗಾಢವಾದ ನಂಟಿದೆ. ಸ್ವಾತಂತ್ರ್ಯಪೂರ್ವದಲ್ಲಿ ಗಾಂಧೀಜಿಯವರು ದೇಶಾದ್ಯಂತ ಸಂಚರಿಸುತ್ತಿದ್ದಾಗ 1934 ರಲ್ಲಿ ಜಿಲ್ಲೆಗೂ ಭೇಟಿ ನೀಡಿ ಅಜ್ಜರಕಾಡಿನಲ್ಲಿ ಸ್ವಾತಂತ್ರ್ಯ ಸೇನಾನಿಗಳನ್ನು ಉದ್ದೇಶಿಸಿ ಮಾತನಾಡಿ ಅವರನ್ನು ಹುರಿದುಂಬಿಸಿದ್ದರು. ಗಾಂಧೀಜಿಯವರ ಭೇಟಿಯ ನೆನಪಿಗಾಗಿ ಅವರ ಪುತ್ಥಳಿ ಈ ಭುಜಂಗಪಾರ್ಕಿನಲ್ಲಿ ಪ್ರತಿಷ್ಠಾಪಿಸಿ ಅವರ ಆದರ್ಶಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಗುರುವಾರ ಜಿಲ್ಲಾಡಳಿತ, ನಗರಸಭೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿ ಕಟ್ಟೆಯಲ್ಲಿ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ಕಂಡ ಮಹಾನ್ ನೇತಾರರಾದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಕೊಡುಗೆ ಮತ್ತು ಚಿಂತನೆಗಳು ನಮಗೆಲ್ಲರಿಗೂ ಆದರ್ಶವಾಗಿದೆ. ಅವರ ಆಶಯದಂತೆ ಇಂದು ದೇಶವು ಬಹಳಷ್ಟು ಪ್ರಗತಿ ಕಂಡಿದ್ದು ಆರ್ಥಿಕತೆಯಲ್ಲಿ ವಿಶ್ವದಲ್ಲೇ ನಾಲ್ಕನೇ ಸ್ಥಾನ ಪಡೆದಿದೆ. ಗಾಂಧೀಜಿ ಮಾರ್ಗದರ್ಶನ ಮಾಡಿದ ಪಥದಲ್ಲಿ ಸಾಗಿ ದೇಶವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು.

ನಗರಸಭಾಧ್ಯಕ್ಷ ಪ್ರಭಾಕರ್ ಪೂಜಾರಿ ಮಾತನಾಡಿ, ಗಾಂಧೀಜಿಯವರ ಆಶಯದಂತೆ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಯಾರಾದರೂ ಕಸವನ್ನು ಎಲ್ಲೆಂದರಲ್ಲಿ ಎಸೆದರೇ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ ಮಹಾತ್ಮಾ ಗಾಂಧೀಜಿ ರಾಷ್ಟ್ರಪಿತರಾದರೆ, ಲಾಲ್ ಬಹಾದ್ದೂರ್ ಶಾಸ್ತ್ರಿಗಳು ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದವರು. ಇಂತಹ ಉನ್ನತ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳ ಜನ್ಮದಿನಾಚರಣೆಯ ಅವರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿಯೂ ಅಳವಡಿಸಿಕೊಂಡು ಮೌಲ್ಯಯುತವಾಗಿ ಬಾಳಿ ದೇಶಕ್ಕೆ ಕೀರ್ತಿ ತರಬೇಕು ಎಂದರು.ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ, ಪಪೂ, ಕಾಲೇಜು ವಿದ್ಯಾರಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಬಿ., ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಮಣಿಪಾಲ್ ಮತ್ತಿತರರು ಹಾಜರಿದ್ದರು.

PREV

Recommended Stories

ಬೆಡ್‌ರೂಮಲ್ಲಿ ರಹಸ್ಯ ಕ್ಯಾಮೆರಾ: ಲೈಂಗಿಕಕ್ರಿಯೆ ಚಿತ್ರೀಕರಿಸಿ ದೌರ್ಜನ್ಯ
ಕಾವೇರಿ ಆರತಿ ನಿಲ್ಲಿಸಲ್ಲ: ಡಿಸಿಎಂ