ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

KannadaprabhaNewsNetwork | Published : Apr 10, 2025 1:00 AM

ಸಾರಾಂಶ

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಸಿಪಿಐ(ಎಂ) ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಸಿಪಿಐ(ಎಂ) ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿಂದ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಮೆರವಣಿಗೆ ಮೂಲಕ ಅಂಬೇಡ್ಕರ್ ವೃತ್ತದವರೆಗೂ ತೆರಳಿ ಪ್ರತಿಭಟನೆಯನ್ನು ನಡೆಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಸಿಪಿಐ(ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಂ.ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಕೇಂದ್ರ ಸರ್ಕಾರ ದಿಢೀರನೆ ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಏರಿಸಿರುವುದು ಅಘಾತಕಾರಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಅತ್ಯಂತ ಕಡಿಮೆ ಇದ್ದು, ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ಎರಡು ರುಪಾಯಿ ಸುಂಕವನ್ನು ಏರಿಸಿ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.

ಇದರಿಂದಾಗಿ ಒಂದೇ ದಿನದಲ್ಲಿ 30,000 ಕೋಟಿ ರುಪಾಯಿ ಕೇಂದ್ರ ಸರ್ಕಾರದ ಖಜಾನೆಗೆ ಬಂದಿದೆ. ಅದೇ ರೀತಿ ಬಡವರಿಗೆ ಆಸರೆಯಾಗಿರುವ ಅಡುಗೆ ಅನಿಲದ ಬೆಲೆಯನ್ನುಸಿಲಿಂಡರ್ ಗೆ ಐವತ್ತು ರುಪಾಯಿಯಂತೆ ಏರಿಸಲಾಗಿದೆ. ಇದರಿಂದ ದಿಢೀರನೇ 7200 ಕೋಟಿ ರು. ಹಣ ಕೇಂದ್ರ ಸರ್ಕಾರದ ಖಜಾನೆ ತಲುಪಿದೆ. ಜನಸಾಮಾನ್ಯರ ಬದುಕಿಗೆ ಈ ಅಗತ್ಯ ವಸ್ತುಗಳ ಬೆಲೆ ಏರಿಕೆ ಭಾರವಾಗಿದೆ. ಮುಂದಿನ ದಿನಗಳಲ್ಲಿ ಹೋಟೆಲ್ ತಿಂಡಿ ಬೆಲೆ, ಜನಸಾಮಾನ್ಯ ಉಪಯೋಗಿಸುವ ಎಲ್ಲ ವಸ್ತುಗಳ ಬೆಲೆ ಗಗನಕ್ಕೆ ಏರುತ್ತದೆ. ತಕ್ಷಣ ಕೇಂದ್ರ ಸರ್ಕಾರ ಈ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ. ಸಿದ್ದಗಂಗಪ್ಪ ಮಾತನಾಡಿ, ಕೇಂದ್ರ ಸರ್ಕಾರ ರಾತ್ರೋರಾತ್ರಿ ಸಿಲಿಂಡರ್ ಬೆಲೆ ರು.50, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ ಎರಡು ರು. ಏರಿಕೆ ಮಾಡಿದೆ. ಇದರಿಂದ ಜನಸಾಮಾನ್ಯರ ಬದುಕಿಗೆ ಬರೆ ಎಳಿದಂತಾಗಿದೆ ಎಂದು ಕಿಡಿಕಾರಿದರು.

ಒಂದು ಕಡೆ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿರುವ ಬಗ್ಗೆ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯನ್ನು ಮಾಡುತ್ತಿದೆ, ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಬೆಲೆ ಏರಿಕೆ ವಿರುದ್ಧ ಮಾತನಾಡದೆ ಇರುವುದು ಖಂಡನೀಯ. ಸಿಪಿಐ(ಎಂ) ಪಕ್ಷ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆಯನ್ನು ವಿರೋಧಿಸುತ್ತದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯದ ಕಾಂಗ್ರೆಸ್ ಸರ್ಕಾರಗಳು ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸುತ್ತದೆ. ಆದ್ದರಿಂದ ಏರಿಕೆ ಮಾಡಿರುವ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪಕ್ಷದ ಮುಖಂಡರಾದ ಜಯರಾಮರೆಡ್ಡಿ, ಬಿ.ಎನ್. ಮುನಿಕೃಷ್ಣಪ್ಪ, ಬಿ. ಸಾವಿತ್ರಮ್ಮ, ಡಿ. ಅಶ್ವತ್ಥ್ ನಾರಾಯಣ, ಜಿ. ಕೃಷ್ಣಪ್ಪ, ಡಿ.ಟಿ. ಮುನಿಸ್ವಾಮಿ, ಗುಡಿಬಂಡೆ ವೆಂಕಟರಾಜು, ಚಿಂತಾಮಣಿ ಆನಂದ್, ಚನ್ನರಾಯಪ್ಪ ಮತ್ತಿತರರು ಇದ್ದರು.

Share this article