ಹೊಸಪೇಟೆ: ನೈಸ್ ಟೋಲ್ ಗೇಟ್ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಿಪಿಐಎಂ ರಾಜ್ಯ ಮುಖಂಡರು ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಸಿಪಿಐಎಂ ತಾಲೂಕು ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಿಪಿಐಎಂ ಮುಖಂಡ ಮರಡಿ ಜಂಬಯ್ಯ ನಾಯಕ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ, ಕಾನೂನುಬದ್ಧವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ಸಿಪಿಐಎಂ ತಾಲೂಕು ಕಾರ್ಯದರ್ಶಿ ಎನ್. ಯಲ್ಲಾಲಿಂಗ ಮಾತನಾಡಿ, ಪ್ರಜಾಪ್ರಭುತ್ವದ ಸೋಗಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದ ಕಾರ್ಪೋರೇಟ್ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಹೋರಾಟಗಾರರ ಬಂಧನ ಮಾಡಿಸುವ ಮೂಲಕ ತನ್ನ ಅಂತರ್ಗತದ ಮುಖವಾಡವನ್ನು ಸಾಬೀತು ಪಡಿಸಿದೆ. ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಅವರು ಹೇಳಿದರು.ಹೈಕೋರ್ಟ್ ಆದೇಶದಂತೆ ನೈಸ್ ಕಂಪನಿ ವಶಪಡಿಸಿಕೊಂಡಿರುವ ರೈತರ ಜಮೀನುಗಳನ್ನು ವಾಪಸ್ ನೀಡಬೇಕು. ಅಕ್ರಮ ಟೋಲ್ ವಸೂಲಿ ನಿಲ್ಲಿಸಬೇಕು. ಭೂಮಿ ಕಳೆದುಕೊಂಡ ರೈತರಿಗೆ ಪುನರ್ವಸತಿ, ನಿವೇಶನ ಹಾಗೂ ಮನೆ ಸೌಲಭ್ಯ ಕಲ್ಪಿಸಬೇಕು. ದಲಿತರಿಗೆ ನಿವೇಶನ, ಮನೆ ಹಾಗೂ ವಸತಿ ಭೂಮಿ ಹಂಚಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.