ಮಕ್ಕಳ ಮನೋವಿಕಾಸಕ್ಕೆ ಪೂರಕ ವಾತಾವರಣ ಸೃಷ್ಟಿಸಿ

KannadaprabhaNewsNetwork | Published : Jun 20, 2024 1:07 AM

ಸಾರಾಂಶ

ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಮೂಲಕ ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಠಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಸರ್ಕಾರ ನೀಡುತ್ತಿರುವ ಸೌಲಭ್ಯಗಳ ಮೂಲಕ ಮಕ್ಕಳ ಮನೋವಿಕಾಸ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಠಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಶಾಲೆ ಬಿಡುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಕಾರಣವೇನೆಂಬುದು ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡು ಹಿಡಿಯುವಂತೆ ಸೂಚಿಸಿದರು.ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಮಕ್ಕಳಿಂದ ಊಟ ಬಡಿಸಬಾರದು, ಮಕ್ಕಳಿಗೆ ಕೂರಿಸಿ ಊಟ ಬಡಿಸಬೇಕು. ಓದುವುದರಲ್ಲಿ ಹಿಂದೆ ಉಳಿದ ಮಕ್ಕಳ ಬಗ್ಗೆ ಹೆಚ್ಚು ಗಮನವಹಿಸಿ ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದುವಂತೆ ಮಾಡಬೇಕು, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಹಕ್ಕುಗಳ ಸಹಾಯವಾಣಿ ಮತ್ತು ಮಕ್ಕಳ ಹಕ್ಕುಗಳ ಸೂಚನಾ ಫಲಕಗಳನ್ನು ಅಳವಡಿಸಬೇಕು. ಶಾಲೆಯಿಂದ ದೂರವಿರುವ ಪೊಲೀಸ್ ಠಾಣೆಯ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಶಾಲಾ ಮಕ್ಕಳಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.ಜಿಲ್ಲೆಯ ಅನೇಕ ಭಾಗದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತಲುಪಲು ಪರದಾಡುತ್ತಿದ್ದು, ವಿದ್ಯಾರ್ಥಿ ಸ್ನೇಹಿ ಸಂಪರ್ಕ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಎಲ್ಲಾ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ (1098)ಯ ಬಗ್ಗೆ ಮಾಹಿತಿಯನ್ನು ಬರೆಸಬೇಕೆಂದು ಸೂಚಿಸಿದರು.ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗರ್ಭಿಣಿಯರಾಗಿರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರಿಂದ ಮಾಹಿತಿ ಪಡೆದು, ಬೇಸರ ವ್ಯಕ್ತ ಪಡಿಸಿದರು. ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚು ಅರಿವು ಮೂಡಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಇಂಥಹ ಪ್ರಕರಣಗಳು ಕಡಿಮೆಯಾಗಲಿವೆ. ಜಿಲ್ಲೆಯ ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 257 ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯವರೆಗೆ 51 ಪ್ರಕರಣಗಳು ಇತ್ಯರ್ಥವಾಗಿದ್ದು, 206 ಪ್ರಕರಣಗಳು ಬಾಕಿ ಉಳಿದುಕೊಂಡಿವೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ವಿಶೇಷ ಪಾಲನಾ ಯೋಜನೆಯಲ್ಲಿ ಎಚ್‌ಐವಿ ಸೋಂಕಿತ, ಭಾದಿತ 311 ಮಕ್ಕಳಿದ್ದು, ಮಾಸಿಕ 1000 ರೂ.ರಂತೆ ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ. ವಾತ್ಸಲ್ಯ ಯೋಜನೆಯಡಿ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾದ, ತಂದೆ, ತಾಯಿ ಜೈಲಿನಲ್ಲಿರುವ, ಏಕಪೋಷಕ ಅನಾಥ ಮಕ್ಕಳಿಗೆ ತಿಂಗಳಿಗೆ 4000 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಅಬ್ದುಲ್ ಖಾದರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Share this article