ನರೇಗಾ ಜಾಗೃತಿ ಮೂಡಿಸಿ, ಕಾಮಗಾರಿ ಬೇಡಿಕೆ ಸ್ವೀಕರಿಸಿ: ಈಶ್ವರಕುಮಾರ ಕಾಂದೂ

KannadaprabhaNewsNetwork |  
Published : Oct 07, 2024, 01:46 AM IST
ಈಶ್ವರಕುಮಾರ ಕಾಂದೂ | Kannada Prabha

ಸಾರಾಂಶ

ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸ್ವೀಕರಿಸಬೇಕಿದೆ.

ಕಾರವಾರ: ಉದ್ಯೋಗ ಖಾತರಿ ನಡಿಗೆ ಸಬ ಲತೆಯೆಡೆಗೆ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅ. 11ರೊಳಗೆ ವಾರ್ಡ್, ಅ. 30ರೊಳಗೆ ಗ್ರಾಮಸಭೆ ನಡೆಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ ಸೂಚಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ್ದು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಅ. 2ರಿಂದ ಒಂದು ತಿಂಗಳ ಕಾಲ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ ಆರಂಭಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯವು ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ 12 ತಾಲೂಕುಗಳ ಎಲ್ಲ ಗ್ರಾಪಂ ಮಟ್ಟದಲ್ಲಿ ಆಯುಕ್ತಾಲಯದ ನಿರ್ದೇಶನದಂತೆ ಗ್ರಾಪಂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಅಭಿಯಾನ ನಡೆಸಬೇಕು ಎಂದು ಸೂಚಿಸಿದರು.

ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸ್ವೀಕರಿಸಬೇಕಿದೆ. ಈ ಕುರಿತು ಮನೆಮನೆಗೆ ಭೇಟಿ ನೀಡಿದ ವೇಳೆ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತರಿಯಾಗಿದ್ದು, ಗಂಡು ಹೆಣ್ಣಿಗೆ ಸಮಾನ ಕೂಲಿ, ಪ್ರತಿ ದಿನಕ್ಕೆ ₹349, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಶೇ. 50 ರಿಯಾಯಿತಿ, ಕಾಮಗಾರಿಯ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ನಿರ್ವಹಿಸುವ ಕೆಲಸಕ್ಕೆ/ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ. 10 ಕೆಲಸ ಪ್ರಮಾಣದಲ್ಲಿ ರಿಯಾಯಿತಿ, ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಠ ಶೇ. 60 ಪ್ರತಿಶತಕ್ಕೆ ಹೆಚ್ಚಿಸುವ ಕುರಿತು ಅಭಿಯಾನದ ವೇಳೆ ಜನರಿಗೆ ತಿಳಿಸಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲ ಸದಸ್ಯರು, ಪಿಡಿಒ, ಸಿಬ್ಬಂದಿ ಹಾಗೂ ನರೇಗಾ ಸಿಬ್ಬಂದಿ, ಕಾಯಕ ಬಂಧುಗಳು, ತಾಂಡಾ ರೋಜಗಾರ್ ಮಿತ್ರರು, ಗ್ರಾಮ ಕಾಯಕ ಮಿತ್ರರು ಬಿಎಫ್‌ಟಿಗಳು, ತಾಂತ್ರಿಕ ಸಹಾಯಕ ಅಭಿಯಂತರರು ಹಾಗೂ ಅನುಷ್ಠಾನ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ಭಾಗವಹಿಸಬೇಕು ಮತ್ತು ತಮ್ಮ ವಾರ್ಡ್‌ಗಳ ಪ್ರತಿ ಮನೆಗೂ ಭೇಟಿ ನೀಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಯ ಅರ್ಜಿಗಳನ್ನು ಸ್ವೀಕರಿಸಲು ಬೇಡಿಕೆ ಪೆಟ್ಟಿಗೆಯನ್ನು ಅಂಗನವಾಡಿ, ಗ್ರಂಥಾಲಯ, ನ್ಯಾಯಬೆಲೆ ಅಂಗಡಿ ಮತ್ತು ಹಾಲಿನ ಕೇಂದ್ರಗಳಲ್ಲಿ ಸ್ಥಾಪಿಸಿ, ಅ. 31ರ ವರೆಗೆ ಅರ್ಜಿಗಳನ್ನು ಸಂಗ್ರಹಿಸಬೇಕು. ಮೊಬೈಲ್ ಅಪ್ಲಿಕೇಶನ್ ಕೂಡ ಸಿದ್ಧವಾಗಿದ್ದು, ಅದರ ಮೂಲಕವೂ ಸಾರ್ವಜನಿಕರು ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಕುರಿತು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ