ಬಳ್ಳಾರಿ: ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಕಾರವೂ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ತಿಳಿಸಿದರು.
ಅಂಗಡಿ, ಹೋಟೆಲ್, ಬೇಕರಿ, ಲಾಡ್ಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೇ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂಧಿಸಿದ ನಾಮಫಲಕಗಳನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 1308 ಶಾಲೆಗಳಲ್ಲಿ 1267 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದ 41 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳಾಗಿ ಘೋಷಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.ಜಿಲ್ಲೆಯ 75 ಪದವಿ ಪೂರ್ವ ಕಾಲೇಜುಗಳ ಪೈಕಿ 62 ಕಾಲೇಜುಗಳಲ್ಲಿ ಸೆಕ್ಷನ್-4 ಮತ್ತು ಸೆಕ್ಷನ್-6ಬಿ ನಾಮಫಲಕಗಳು ಅಳವಡಿಸಲಾಗಿದ್ದು, ಬಾಕಿ ಉಳಿದ ಕಾಲೇಜುಗಳಲ್ಲಿ ಈ ಕೂಡಲೇ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಿಡಿಪಿಯುಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳಲ್ಲಿ ಹಾಗೂ ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದ್ದು, ನಿಮಮಾನುಸಾರ ಸಭೆ ನಡೆಸಿ ಕೋಟ್ಪಾ-2003ರ ಸೆಕ್ಷನ್ 4,5,6ಎ ಮತ್ತು 7ರ ಅನುಷ್ಠಾನಗೊಳಿಸಬೇಕು ಹಾಗೂ ಕಾರ್ಯಾಚರಣೆ ನಡೆಸಿ ದಂಡ ಸಂಗ್ರಹಿಸುವಂತೆ ಅವರು ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೈಕ್ ಮೂಲಕ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಪರಿಣಾಮ ಕುರಿತು ಪ್ರಚಾರ ನೀಡಬೇಕು ಎಂದು ತಿಳಿಸಿದರು.
ಡಿಎಚ್‌ಒ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.