ಬಳ್ಳಾರಿ ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆಯ ಅರಿವು ಮೂಡಿಸಲು ಡಿಸಿ ಸೂಚನೆ

KannadaprabhaNewsNetwork |  
Published : Jul 19, 2025, 01:00 AM IST
( ಈ ವರದಿಗೆ ಡಿಸಿ ಫೋಟೋ ಬಳಸಿಕೊಳ್ಳುವುದು )  | Kannada Prabha

ಸಾರಾಂಶ

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆಯಿತು.

ಬಳ್ಳಾರಿ: ಪೊಲೀಸ್ ಇಲಾಖೆಯಿಂದ ಗ್ರಾಮಸಭೆಗಳಲ್ಲಿ, ಶಿಕ್ಷಣ ಇಲಾಖೆ ವತಿಯಿಂದ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿಯೂ ಸಹ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಇತರ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಇಲಾಖೆಗಳು ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗುವ ದಿಸೆಯಲ್ಲಿ ಲಿಂಗಾನುಪಾತ ಕಡಿಮೆ ಇರುವ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಅರಿವು ಮೂಡಿಸುವ ಕೆಲಸವೂ ಆಗಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 6 ವರ್ಷದೊಳಗಿನ ಮಕ್ಕಳ ಕುಂಠಿತ ಬೆಳವಣಿಗೆ, ತೂಕ ನಿಯಂತ್ರಣ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟುವಿಕೆ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ ಯೋಜನೆಯಿದ್ದು, ಫಲಾನುಭವಿಗಳನ್ನು ಗುರುತಿಸಿ ಪೋಷಣ್ ತಂತ್ರಾಶದಲ್ಲಿ ಆಧಾರ್ ಸೀಡಿಂಗ್ ಮಾಹಿತಿಯನ್ನು ತಪ್ಪಿಲ್ಲದಂತೆ ನಮೂದಿಸಬೇಕು ಎಂದು ಸೂಚಿಸಿದರು.

ಅನಾಥ, ನಿರ್ಗತಿಕ, ಪೊಲೀಸ್‌ರಿಂದ ಅಭಿರಕ್ಷಣೆಗಾಗಿ ದಾಖಲಾದ ಮಹಿಳೆಯರು ಆಶ್ರಯ ಪಡೆಯಲು ಬಳ್ಳಾರಿಯಲ್ಲಿ ರಾಜ್ಯ ಮಹಿಳಾ ನಿಲಯವಿದ್ದು, ಅವರ ಆರೈಕೆಗಾಗಿ ಸಿಬ್ಬಂದಿ ಕೊರತೆಯಿದ್ದಲ್ಲಿ ಸಂಬಂಧಿಸಿದ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆಯಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕುಟುಂಬಗಳಲ್ಲಿ ಯಾವುದೇ ಬಗೆಯ ಸಮಸ್ಯೆಗಳಲ್ಲಿ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ದೌಜನ್ಯಕ್ಕೊಳಗಾದ ಮಹಿಳೆಯರನ್ನು ರಕ್ಷಿಸಲು ಜಿಲ್ಲಾ ಮಟ್ಟದಲ್ಲಿ ಸಂರಕ್ಷಣಾಧಿಕಾರಿಯನ್ನು ನೇಮಿಸಲಾಗಿದ್ದು, ಮಹಿಳೆಯರ ಉಚಿತ ಸಹಾಯವಾಣಿ ಸಂಖ್ಯೆ 181ನ್ನು ಗ್ರಾಮಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ಹೆಚ್ಚಾಗಿ ಪ್ರಚಾರ ಮಾಡಬೇಕು.

ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ, ಬಾಲ್ಯವಿವಾಹ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಖಿ ಒನ್ ಸ್ಟಾಪ್ ಸೆಂಟರ್, ಬಾಲಕಿಯರ ವಸತಿ ನಿಲಯ, ದಮನಿತ ಮಹಿಳೆಯರ/ಟ್ರಾನ್ಸ್ ಜೆಂಡರ್ಸ್, ಸಾಂತ್ವನ ಕೇಂದ್ರಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜರುಗಿತು.

ಬಳ್ಳಾರಿ ನಗರ ಡಿಎಸ್ಪಿ ಚಂದ್ರಕಾಂತ ನಂದಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ