ಕನ್ನಡಪ್ರಭ ವಾರ್ತೆ ಪಾಂಡವಪುರ
ಸಾಂಕ್ರಾಮಿಕ ರೋಗ ಡೆಂಘೀ ನಿವಾರಣೆಗೆ ಎಲ್ಲಾ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು ಎಂದು ತಾಪಂ ಇಒ ಲೋಕೇಶ್ ಮೂರ್ತಿ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಪಂ, ತಾಪಂ, ಆರೋಗ್ಯ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ನಡೆದ ರಾಷ್ಟ್ರೀಯ ಡೆಂಘೀ ದಿನಾಚರಣೆ ಪ್ರಯುಕ್ತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಡೆಂಘೀ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈಡಿಸ್ ಎಂಬ ಸೊಳ್ಳೆ ಕಚ್ಚುವುದರಿಂದ ಸೋಂಕು ಹರಡುತ್ತದೆ. ಸೋಂಕು ತಗುಲಿದ ವ್ಯಕ್ತಿಗೆ ಸೊಳ್ಳೆ ಕಚ್ಚಿದ ನಂತರ ಆರೋಗ್ಯವಂತ ಮನುಷ್ಯನಿಗೆ ಕಚ್ಚಿದರೆ ಡೆಂಘೀ ಹರಡುತ್ತದೆ. ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣ ಕುರಿತು ಅರಿವು ಮೂಡಿಸಿಕೊಳ್ಳಬೇಕು ಎಂದರು.ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಡೆಂಘೀ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆ ಜೊತೆಗೆ ಪಂಚಾಯತಿ ಅಧಿಕಾರಿಗಳು ಸಹ ಹೆಚ್ಚಿನ ಸಹಕಾರ ನೀಡುವುದು ಅಗತ್ಯ. ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ, ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಒಡೆದ ಬಾಟಲಿ ಹಾಗೂ ಟೈರುಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಬೇಕು ಎಂದು ತಿಳಿಸಿದರು.
ಡೆಂಘೀ ಜ್ವರಕ್ಕೆ ತುತ್ತಾದವರಲ್ಲಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಲ್ಲಿ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ ಎಂದರು.ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಈ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಆಶಾರಾಜ್, ಲೆಕ್ಕಾಧಿಕಾರಿ ಅನಿತಾ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ ಎನ್.ಸಿ., ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟಸ್ವಾಮಿ, ಹಿರಿಯ ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳಾದ ರಾಣಿ, ಆಶಾ, ಕರುಣಾ, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಇದ್ದರು.