ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಮಳೆಗಾಲ ಆರಂಭವಾಗಿದ್ದು, ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಮೂಲ, ನೀರು ಸರಬರಾಜು ಮಾರ್ಗಗಳಲ್ಲಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ನೀರಿನ ಆಕರ, ಪೂರೈಕೆ ಸ್ಥಳಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಮುಂದೆ ಉಂಟಾಗಬಹುದಾದ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವ ನೀರಿನ ಮೂಲ ಆಕರಗಳು, ಒಎಚ್‌ಟಿ, ಮಿನಿ ಟ್ಯಾಂಕ್‌ಗಳಂತಹ ಸಂಗ್ರಹಗಾರಗಳು ಹಾಗೂ ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗಳಲ್ಲಿ ವಿವಿಧ ಕಾರಣಗಳಿಂದ ನೀರು ಕಲುಷಿತಗೊಳ್ಳುತ್ತದೆ. ಈ ನೀರನ್ನು ಕುಡಿಯಲು ಬಳಸುವುದರಿಂದ ಜನರಲ್ಲಿ ಕಾಯಿಲೆಗಳು ಬರುತ್ತವೆ. ಇದನ್ನು ತಪ್ಪಿಸಲು ಕಲುಷಿತ ನೀರಿನ ಸ್ಥಳಗಳಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ಬರೆಯಿಸಿ. ಸ್ಥಳೀಯ ಸಂಸ್ಥೆಗಳು ಕೂಡ ಇಂತಹ ಕಲುಷಿತ ನೀರಿನ ಆಕರ, ಸರಬರಾಜು ಕೇಂದ್ರಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು. ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ನಿಯಮಿತವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಬಗ್ಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯಗಳು, ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ವಸತಿ ನಿಲಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ದಿಷ್ಟ ಸಂಖ್ಯಾಬಲಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಂಗನವಾಡಿಗಳಿಗೆ ನಿವೇಶನ ಗುರುತಿಸುವುದು, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ತಹಸೀಲ್ದಾರ ವಿಠ್ಠಲ್ ಚೌಗಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.