ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಾತ್ರಿಪಡಿಸಲು, ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಡಿಸಿ ತಲಾ ಕನಿಷ್ಠ 5 ಕಾಮಗಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.ಅವರು ಶುಕ್ರವಾರ ಜಿಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚೆಗೆ ಶಂಕುಸ್ಥಾಪನೆ, ಉದ್ಘಾಟನೆಗೊಂಡ ಕಾಮಗಾರಿಗಳ ಗುಣಮಟ್ಟ ಖಾತರಿಪಡಿಸಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ಲಸ್ಟರ್‌ಗಳ ರಚಿಸಿ 2 ತಿಂಗಳ ಪುನರ್ ಮನನ ತರಗತಿ ನಡೆಸಲು ಆದೇಶಿಸಿದರಲ್ಲದೆ ಶಿಥಿಲ ಶಾಲೆಗಳ ಕಟ್ಟಡಗಳ ಬಗ್ಗೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿ ವರದಿ ಸಲ್ಲಿಸಲು ತಿಳಿಸಿದರು.ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚನೆ: ಅಪ್ರಾಪ್ತ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಮಾದಕ ದ್ರವ್ಯ ಸಾಗಾಣಿಕೆ ಪ್ರಕರಣಗಳ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಚಿವರು, ಬಾಲಕಿಯರ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ತ್ವರಿತಗೊಳಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಚಿವ ರಹೀಮ್ ಖಾನ್, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದಲಿಂಗಪ್ಪ ಪಾಟೀಲ್, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್, ಎಂ.ಜಿ. ಮೂಳೆ, ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಖಂಡ್ರೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಸೇರಿದಂತೆ ಅಧಿಕಾರಿಗಳು ಇದ್ದರು.