ಮಾದಕ ದ್ರವ್ಯಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸಿ

KannadaprabhaNewsNetwork | Published : Dec 14, 2024 12:49 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿಯ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸಬೇಕು ಎಂದು ತಿಳಿಸಿದರು.ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೊಳಪಡುವ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ, ಗಾಂಜಾ ಸಸಿ, ಗಿಡಗಳು ಬೆಳೆಯದಂತೆ ನಿಗಾ ವಹಿಸಬೇಕು. ಮಾದಕ ದ್ರವ್ಯಗಳ ಸಸಿಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆ ಮಾಹಿತಿ ಒದಗಿಸುವಂತೆ ಅವರು ಸೂಚನೆ ನೀಡಿದರು. ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳನ್ನುಳ್ಳ ಔಷಧಿ ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಚೀಟಿಯೊಂದಿಗೆ ಮಾರಾಟಕ್ಕೆ ಮಾತ್ರ ಅವಕಾಶ ಒದಗಿಸಬೇಕು. ಈ ಕುರಿತು ಜಿಲ್ಲೆಯಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಲಾಗಿದೆ. ಜಿಲ್ಲೆಯಾದ್ಯಂತ ಕಳೆದ ೩ ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ೨೦೨೨ ರಲ್ಲಿ ೨೧ ಪ್ರಕರಣಗಳನ್ನು ದಾಖಲಿಸಿ ೪೪ ಕೆ.ಜಿ. ೪೧೬ ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ೩೬.೪೫ ಕೆಜಿ ಮಾದಕ ದ್ರವ್ಯಗಳನ್ನು ನಾಶಪಡಿಸಿಲಾಗಿದೆ. ಅದರಂತೆ ೨೦೨೩ನೇ ಸಾಲಿನಲ್ಲಿ ೨೯ ಪ್ರಕರಣಗಳನ್ನು ದಾಖಲಿಸಿ, ೨೭೭ ಕೆಜಿಗೂ ಹೆಚ್ಚಿನ ಗಾಂಜಾ ಜಪ್ತಿ ಮಾಡಿ ೨೦೨ ಕೆಜಿಗೂ ಹೆಚ್ಚಿನ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. ೨೦೨೪ನೇ ಸಾಲಿನಲ್ಲಿ ೨೪ ಪ್ರಕರಣಗಳನ್ನು ದಾಖಲಿಸಿ, ೧೪೬.೮೦೮ ಕೆಜಿ ಮಾದಕ ದ್ರವ್ಯ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share this article