ಬೆಳೆ ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ: ಡಿಸಿ

KannadaprabhaNewsNetwork |  
Published : Oct 30, 2024, 12:42 AM IST
ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.  | Kannada Prabha

ಸಾರಾಂಶ

ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು

ಗದಗ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾದಿಕಾರಿ ಬಿ.ಎಸ್. ನೇಮಗೌಡ ನೇತೃತ್ವದ ತಂಡ ಮಂಗಳವಾರ ಮಳೆಯಿಂದ ಬೆಳೆ ಹಾನಿಯಾದ ಗದಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗದಗ ತಾಲೂಕಿನ ಸಂಭಾಪುರ, ಮುಳಗುಂದ ಸೇರಿದಂತೆ ವಿವಿಧ ಗ್ರಾಮಗಳ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಸ್ಥಿತಿ ಅವಲೋಕಿಸಿದರು. ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು. ಈ ಬಗ್ಗೆ ಸರ್ಕಾರ ನೀಡಿರುವ ಮಾರ್ಗಸೂಚಿಯನ್ವಯ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಳ್ಳುವ ಮೂಲಕ ಅರ್ಹರಿಗೆ ಸರ್ಕಾರದ ಸಹಾಯಧನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಇಲಾಖಾಧಿಕಾರಿಗಳು ಸಮನ್ವಯದೊಂದಿಗೆ ನಿರ್ವಹಿಸುವಂತೆ ಸೂಚಿಸಿದರು.

ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಾದ ಮೆಕ್ಕೆಜೋಳ, ಮೆಣಸಿನಕಾಯಿ, ಈರುಳ್ಳಿ ಬೆಳೆಗಳ ಹಾನಿ ವೀಕ್ಷಣೆ ನಡೆಸಿದ ಅವರು, ಅಧಿಕ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಬೆಳೆ ಹಾನಿ ಜಂಟಿ ಸಮೀಕ್ಷೆ ನಡೆಸುವವರು ಸರಿಯಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು ಹಾಗೂ ಸಮೀಕ್ಷೆ ಕಾರ್ಯವು ನಿಖರತೆಯಿಂದ ಕೂಡಿರಲಿ. ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಳೆ ಹಾನಿಗೊಳಗಾದ ರೈತರು ಜಿಲ್ಲಾಧಿಕಾರಿಗೆ ಬೆಳೆ ಹಾನಿ ನಷ್ಟ ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಜಿಲ್ಲಾಧಿಕಾರಿಗಳು ಮಾತನಾಡಿ, ಹಾನಿ ಸಮೀಕ್ಷೆ ಕಾರ್ಯ ನಡೆಯುತ್ತಲಿದೆ. ಸರ್ಕಾರದ ನಿಯಮಾವಳಿಗಳಲ್ಲಿ ಇರುವ ಅವಕಾಶ ಬಳಸಿಕೊಂಡು ಅರ್ಹ ಬೆಳೆ ಹಾನಿ ರೈತರಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ರೈತರು, ಸಾರ್ವಜನಿಕರು ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ