ಶಿರಸಿ: ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದಿಂದ ಜಿಲ್ಲೆಯ ರೈತರ ಬೆಳೆ ವಿಮೆ ಮಂಜೂರಾತಿಗೆ ತೊಡಕಾಗಿ ಪರಿಣಮಿಸಿದೆ. ಈ ಧೋರಣೆ ಖಂಡಿಸಿ ಏ. 15 ಮತ್ತು 16ರಂದು ಜಿಲ್ಲೆಯ ಎಲ್ಲ ತಾಲೂಕು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಹೇಳಿದರು.
ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಸೀಬರ್ಡ್ ಭೂಮಿ ನಿರಾಶ್ರಿತರಿಗೆ ಪರಿಹಾರ ಸಿಗುವ ಪ್ರಯತ್ನ ಆಗಿದೆ. ಇಷ್ಟೆಲ್ಲ ಇದ್ದರೂ ಕಾಂಗ್ರೆಸ್ ನಾಯಕರು ವೃಥಾ ಆರೋಪ ಮಾಡುವುದನ್ನು ಬಿಡುವುದು ಒಳಿತು. ಕುಮಟಾ ಶಾಸಕ ದಿನಕರ ಶೆಟ್ಟಿ ಅವರನ್ನು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದರು.
ಮಧ್ಯಪ್ರಾಚ್ಯದ ಯುದ್ಧದ ಬಿಕ್ಕಟ್ಟಿನಿಂದಾಗಿ ಪ್ರಪಂಚದ ಬೇರೆಲ್ಲ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಆದರೆ ಕೇಂದ್ರ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಸತತ ಯತ್ನದ ಫಲವಾಗಿ ಹರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳು ಸುರಕ್ಷಿತವಾಗಿ ಅನಿಲ ಹೊತ್ತು ದಾಟುವ ವ್ಯವಸ್ಥೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಅಡುಗೆ ಅನಿಲದ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅನಗತ್ಯವಾಗಿ ನಮ್ಮ ಸಂಸದರು, ಪಕ್ಷದ ಮುಖಂಡರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ ಮಾತನಾಡಿ, ಬಿಪಿಎಲ್ ಕಾರ್ಡ್ ಮಾನದಂಡ ಬದಲಿಸಿ ಬಡವರ ಪಿಂಚಣಿ ಹಣ ಕಸಿಯಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.