ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

KannadaprabhaNewsNetwork | Published : Jan 11, 2024 1:31 AM

ಸಾರಾಂಶ

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರುನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಬಂಧಿ ನಿವಾಸಿಗಳ ಮನ ಪರಿವರ್ತನೆಗಾಗಿ ಆಯೋಜಿಸಲಾಗಿದ್ದ “ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜೈಲಿನಲ್ಲಿ ಕೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ. ಸಾಕಷ್ಟು ತರಕಾರಿ, ಹಣ್ಣು ಗಿಡ ಮರಗಳು ಇಲ್ಲಿವೆ. ಈ ನಿಟ್ಟಿನಲ್ಲಿ ಜೈಲು ಅಧಿಕಾರಿಗಳ ಪ್ರೋತ್ಸಾಹ ಮೆಚ್ಚುವಂತದ್ದು. ಇಲ್ಲಿ ನರ್ಸರಿ ಸ್ಥಾಪಿಸಿ, ಮರ ಗಿಡಗಳ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ಸ್ಥಳಾವಕಾಶ ನೀಡಲು ಮಹಾನಗರ ಪಾಲಿಕೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.ಜೈಲಿನಲ್ಲಿರುವ ನಿವಾಸಿಗಳ ಮನಪರಿವರ್ತನೆ ನಿಟ್ಟಿನಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಲು ಪರಿಶೀಲಿಸಲಾಗುವುದು ಎಂದೂ ಜಿಲ್ಲಾಧಿಕಾರಿ ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಕೈದಿಗಳ ಮನ ಪರಿವರ್ತನೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯ ಎಂದರು.ಸಮಾರಂಭದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಪತ್ರಕರ್ತ ಹರ್ಷ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್, ಸುಭಾಷ್ ಇದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ನೃತ್ಯ, ಯಕ್ಷಗಾನ, ಜಾನಪದ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.

ಇದೇ ಸಂದರ್ಭ ಜಿಲ್ಲಾಧಿಕಾರಿ ಅವರು ಕೈದಿಗಳ ವಿವಿಧ ಬ್ಯಾರಾಕ್‍ಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಮತ್ತು ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಕಾರಾಗೃಹದ ಅಡುಗೆಕೋಣೆಗೆ ಭೇಟಿ ನೀಡಿ ಆಹಾರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.

Share this article