ಸ್ವಾತಂತ್ರ್ಯೋತ್ಸವ ಮುನ್ನಾದಿನ ಸಾಂಸ್ಕೃತಿಕ ಯುವ ಸಂಭ್ರಮ

KannadaprabhaNewsNetwork |  
Published : Aug 01, 2025, 12:30 AM IST
31ಡಿಡಬ್ಲೂಡಿ5ಸ್ವಾತಂತ್ರ‍್ಯ ದಿನಾಚರಣೆ ಹಾಗೂ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದ ಭಿತ್ತಿಪತ್ರ, ಕರಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.  | Kannada Prabha

ಸಾರಾಂಶ

79ನೇ ಸ್ವಾತಂತ್ರ‍್ಯೋತ್ಸವದ ಸಾಂಸ್ಕೃತಿಕ ಯುವ ಸಂಭ್ರಮವು ಯುವಕ, ಯುವತಿಯರಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವಂತಹ ಕಾರ್ಯಕ್ರಮವಾಗಬೇಕು. ಅದು ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತುವ ಒಂದು ಮಹತ್ವದ ಘಟ್ಟವಾಗಬೇಕು.

ಧಾರವಾಡ: ಪ್ರಸಕ್ತ ಸಾಲಿನ ಸ್ವಾತಂತ್ರೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಯುವ ಸಮೂಹದಲ್ಲಿ ಸ್ವಾತಂತ್ರೋತ್ಸವದ ದೇಶ ಪ್ರೇಮವನ್ನು ಬೆಳೆಸುವ ಮತ್ತು ಆ ಘಳಿಗೆಯನ್ನು ಸ್ಮರಿಸುವ ಉದ್ದೇಶದಿಂದ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳು ತಮ್ಮ ವಿದ್ಯಾರ್ಥಿಗಳ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಸ್ವಾತಂತ್ರ‍್ಯ ದಿನಾಚರಣೆ ಹಾಗೂ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದ ಭಿತ್ತಿಪತ್ರ, ಕರಪತ್ರ ಬಿಡುಗಡೆ ಮತ್ತು ವಿವಿಧ ಕಾಲೇಜು, ವಿಶ್ವವಿದ್ಯಾಲಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸಿದ ಅವರು, ಆ. 14ರ ಸಂಜೆ 6 ರಿಂದ ಮಧ್ಯರಾತ್ರಿ 12ರ ವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಸ್ವಾತಂತ್ರ‍್ಯೋತ್ಸವದ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಸಿದ್ಧತೆಯನ್ನು ಮಾಡಿಕೊಳ್ಳಲು ಸೂಚಿಸಿದರು.

79ನೇ ಸ್ವಾತಂತ್ರ‍್ಯೋತ್ಸವದ ಸಾಂಸ್ಕೃತಿಕ ಯುವ ಸಂಭ್ರಮವು ಯುವಕ, ಯುವತಿಯರಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವಂತಹ ಕಾರ್ಯಕ್ರಮವಾಗಬೇಕು. ಅದು ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತುವ ಒಂದು ಮಹತ್ವದ ಘಟ್ಟವಾಗಬೇಕು. ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅವರಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿಕೊಡಲಾಗಿದೆ ಎಂದರು.

ಜಿಲ್ಲೆಯ ಜಾನಪದ ಕಲೆಗಳು, ಸ್ಥಳೀಯ ಪ್ರತಿಭೆಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಇದರಿಂದ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ. ಪೊಲೀಸ್ ಇಲಾಖೆಯು ಕಾರ್ಯಕ್ರಮದ ಸ್ಥಳದಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಇನ್ನು, ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ‍್ಯ ದಿನೋತ್ಸವದ ಕಾರ್ಯಕ್ರಮಗಳು ನಡೆಯಲಿವೆ. ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಮಕ್ಕಳಿಂದ ಏರ್ಪಡಿಸಲು ಶಿಕ್ಷಣ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಾನಗರದ ವಿವಿಧ ವಿಶ್ವವಿದ್ಯಾಲಯಗಳ, ಮಹಾವಿದ್ಯಾಲಯಗಳ ಮುಖ್ಯಸ್ಥರು, ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ