ಕಪ್‌ ಕಾಲ್ತುಳಿತ: ಸರ್ಕಾರ ವಿರುದ್ಧ ಬಿಜೆಪಿ ಧರಣಿ

KannadaprabhaNewsNetwork |  
Published : Jun 09, 2025, 04:25 AM IST
ಬಿಜೆಪಿ ಪ್ರತಿಭಟನೆ  | Kannada Prabha

ಸಾರಾಂಶ

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಘಟನೆಯ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಘಟನೆಯ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು.

ಭಾನುವಾರ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪಕ್ಷದ ಶಾಸಕರು ಕಾಲ್ತುಳಿತದಲ್ಲಿ ನಿಧನ ಹೊಂದಿದವರಿಗೆ ಮೌನಾಚರಣೆ ಸಲ್ಲಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.

ಈ ವೇಳೆ ಮತ್ತು ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಶೋಕ್‌, ಕಾಲ್ತುಳಿತ ಘಟನೆಗೂ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಕ್ತಿಗಳ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್‌ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲು ಹೃದಯದವರು ಎಂದು ಹರಿಹಾಯ್ದರು.

ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. 4ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿ ಒಟ್ಟು 200 ಜನ ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು.

ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಆರ್‌ಸಿಬಿ ಕಪ್ ಗೆದ್ದಿರುವುದು. ಆದರೆ, ಅದರ ಕ್ರೆಡಿಟ್ ತೆಗೆದುಕೊಳ್ಳುವ ಹಪಾಹಪಿಗೆ ಸರ್ಕಾರ ಬಿದ್ದಿತ್ತು. ಈ ದುರಂತ ಸರ್ಕಾರದ ಸ್ವಯಂಕೃತ ಅಪರಾಧ. ಪ್ರಯಾಗ್ ರಾಜ್ ಕಾಲ್ತುಳಿತ, ಪಹಲ್ಗಾಂ ಬಗ್ಗೆ ಮಾತನಾಡುತ್ತೀರಿ. ಅವು ಅನಾಹುತಗಳು. ಆದರೆ, ನಿಮ್ಮದು ಸ್ವಯಂಕೃತಾಪರಾಧ ಎಂದು ಆಪಾದಿಸಿದರು.

ಕಾಲ್ತುಳಿದ ದುರ್ಘಟನೆ ಸರ್ಕಾರಿ ಪ್ರಾಯೋಜಿತ ಕೊಲೆ. ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ವಜಾಗೊಳಿಸಿದರೆ ಮಾತ್ರ ನಿಧನ ಹೊಂದಿದ ಹನ್ನೊಂದು ಮಂದಿಯ ಆತ್ಮಕ್ಕೆ ಶಾಂತಿ ಸಿಗಲಿದೆ.

-ಆರ್.ಅಶೋಕ್, ವಿಧಾನಸಭೆ ಪ್ರತಿಪಕ್ಷ ನಾಯಕ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ