ಜಿಲ್ಲಾ ಮಟ್ಟದ ಎನ್‌ಕಾರ್ಡ್ ಸಮಿತಿ ಸಭೆಯಲ್ಲಿ ಲಕ್ಷ್ಮೀಪ್ರಿಯಾ ಸೂಚನೆ
ಕನ್ನಡಪ್ರಭ ವಾರ್ತೆ ಕಾರವಾರಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕೃಷಿ ಭೂಮಿಗಳ ಮಧ್ಯದಲ್ಲಿ ಇತರ ಬೆಳೆಗಳ ಜೊತೆ ಗಾಂಜಾ ಬೆಳೆ ಬೆಳೆಯುವ ಸಾಧ್ಯತೆ ಇರುವುದರಿಂದ ಬೆಳೆ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಗಾಂಜಾ ಬೆಳೆದಿರುವುದು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಿದ ಅವರು, ಪ್ರಸ್ತುತ ಕಬ್ಬು ಕಟಾವಣೆ ಪ್ರಾರಂಭವಾಗಿದ್ದು, ಈ ಪ್ರದೇಶಗಳಲ್ಲಿ ಕೂಡಾ ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ ರೆಸಾರ್ಟ್ ಮತ್ತು ಹೊಂ ಸ್ಟೇಗಳ ಮಾಲೀಕರಿಗೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಬಳಕೆಗೆ ಅವಕಾಶ ನೀಡದ ಕುರಿತಂತೆ ಜಾಗೃತಿ ಮೂಡಿಸಬೇಕು. ಹೊಟೇಲ್ ರೆಸಾರ್ಟ್‌ಗಳಲ್ಲಿ ಸಿಸಿಟಿವಿ ಕಾರ್ಯನಿರ್ವಹಿಸದಿದ್ದರೆ ಪರವಾನಿಗೆ ನವೀಕರಣದ ಸಮಯದಲ್ಲಿ ಸಿಸಿಟಿವಿ ಕಾರ್ಯನಿರ್ವಹಣೆ ಬಗ್ಗೆಖಚಿತಪಡಿಸಿಕೊಂಡು ಪರವಾನಿಗೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲೆಗೆ ಹೊರ ರಾಜ್ಯಗಳಿಂದ ಮಾದಕ ವಸ್ತುಗಳುಸರಬರಾಜಾಗುತ್ತಿದ್ದು, ಸ್ಥಳೀಯ ಪ್ಲೆಡ್ಲರ್‌ಗಳು ಮತ್ತು ಪ್ರವಾಸಿಗರು ಮಾದಕ ವಸ್ತುಗಳ ಸೇವನೆಯಲ್ಲಿ ತೊಡಗುತ್ತಿರುವುದು ಕಂಡು ಬರುತ್ತಿದೆ, ಈ ಸಂಬಂಧ ಎಲ್ಲಾ ತಾಲೂಕುಗಳಲ್ಲಿ ಟೆಸ್ಟಿಂಗ್ ಕಿಟ್ ಇಡಲಾಗಿದ್ದು, 2025ರ ಸಾಲಿನಲ್ಲಿ ಮಾದಕ ವಸ್ತುಗಳ ಸೇವನೆ ಕುರಿತಂತೆ 126 ಪ್ರಕರಣ ದಾಖಲಿಸಿ 154 ಮಂದಿಯನ್ನು ಬಂಧಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಪ್ರಮುಖ ಸಾರ್ವಜನಿಕ ಸ್ಥಳ ಮತ್ತು ಪ್ರವಾಸಿ ತಾಣಗಳಲ್ಲಿ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಲಾಗುತ್ತಿದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸಾರ್ವಜನಿಕರು ಮಾದಕ ವಸ್ತುಗಳ ಸೇವನೆ ಮಾಡುವವರ ಅಥವಾ ಮಾರಾಟ ಮಾಡುವವರ ಮಾಹಿತಿ ನೀಡಬಹುದಾಗಿದ್ದು, ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುತ್ತದೆ ಎಂದರು.ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿಯನ್ನು ಕಡ್ಡಾಯವಾಗಿ ರಚನೆ ಮಾಡುವಂತೆ ಅವರು ತಿಳಿಸಿದರು.
ಅಬಕಾರಿ ಇಲಾಖೆ, ಕರಾವಳಿ ಕಾವಲು ಪಡೆ, ಇಂಡಿಯನ್ ಕೋಸ್ಟ್ ಗಾರ್ಡ್ ಹಾಗೂ ರೈಲ್ವೆ ಪೊಲೀಸರಿಗೆ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಹೆಚ್ಚಿನ ಅಧಿಕಾರ ಇರುವುದರಿಂದ ತಮ್ಮ ಹಂತದಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಸೇವನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ, ಅವರ ವಿವರವನ್ನು ಪೊಲೀಸ್ ಇಲಾಖೆಗೆ ನೀಡುವಂತೆ ತಿಳಿಸಿದ ಅವರು, ಕಾರವಾರ, ಗೋಕರ್ಣ ಮತ್ತು ಮುರ್ಡೇಶ್ವರದಂತಹ ಪ್ರಮುಖ ರೈಲ್ವೆ ನಿಲ್ದಾಣದಲ್ಲಿ ಅತ್ಯಾಧುನಿಕ ಫೇಸ್ ರೆಕಗ್ನೇಷನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ರೈಲ್ವೆ ಪೊಲೀಸರಿಗೆ ಸೂಚನೆ ನೀಡಿದರು.ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಇದ್ದರು.